ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್ ಕಾರಂತ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.
ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಕಾರಂತ್ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್ ಕಾರಂತ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ
ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.
ಇದನ್ನೂ ಓದಿ: MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ