Site icon Vistara News

ಯೋಗ ದಿನಕ್ಕೆ ಮೋದಿ: ಸಿಎಂ ಬೊಮ್ಮಾಯಿ ಜತೆ ಪ್ರಧಾನಿ ಸಭೆ

ಬೆಂಗಳೂರು: ಪ್ರಸಕ್ತ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಪ್ರಮುಖ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯುವ ಕಾರಣ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಗುರುವಾರ ಸಭೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಸ್ವತಃ ಭಾಗವಹಿಸಲಿರುವ ಮೋದಿ, ಕಾರ್ಯಕ್ರಮದ ಆಯೋಜನೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಸಭೆಯಲ್ಲಿ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ | ಪ್ರಧಾನಿ ಭಾಗವಹಿಸುವ ಯೋಗ ದಿನ ಆಚರಣೆ ಸಿದ್ಧತೆ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

ಹದಿನೈದು ಸಾವಿರಕ್ಕೂ ಹೆಚ್ಚು ಜನರನ್ನು ಕಾರ್ಯಕ್ರಮದಲ್ಲಿ ಸೇರಿಸಲಾಗುತ್ತಿದೆ. ಈಗಾಗಲೆ ಯೋಗಾಭ್ಯಾಸ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೂ ಮುನ್ನ ಮೈಸೂರಿನ ವಿವಿಧ ಯೋಗ ಶಾಲೆಗಳು, ಶಾಲಾ ಕಾಲೇಜುಗಳನ್ನು ಸಂಪರ್ಕಿಸಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯೋಗ ದಿನಕ್ಕೂ ಮುನ್ನವೇ ಮೈಸೂರಿನಲ್ಲಿ ಯೋಗದ ವಾತಾವರಣ ನಿರ್ಮಿಸಲಾಗುತ್ತಿದೆ.

ಭಾಗವಹಿಸಿದವರಿಗೆ ಪಾನೀಯ, ಊಟೋಪಚಾರ ಸೇರಿ ಎಲ್ಲ ವ್ಯವಸ್ಥೆಗಳನ್ನೂ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗುತ್ತಿದೆ. ಭದ್ರತೆ ದೃಷ್ಟಿಯಿಂದಲೂ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಪ್ರಧಾನಿಯವರಿಗೆ ಮಾಹಿತಿ ನೀಡಲಾಗಿದೆ. ಜೂನ್‌ 21ರಂದು ಮೈಸೂರಿನಲ್ಲಿ ಯೋಗ ದಿನವಿದ್ದು, 20ರಂದೇ ಪ್ರಧಾನಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ನಡೆಯುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಧಾನಿಯವರೊಂದಿಗೆ ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕಟ್ಟು ನಿಟ್ಟಿನ‌ ಸೂಚನೆ ನೀಡಿದರು. ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಅವರು, ಪ್ರಧಾನಿಗಳ ಎರಡು ದಿನಗಳ ಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ | ಯೋಗದಿನದಲ್ಲಿ ರಾಜ್ಯ ಸರ್ಕಾರದ್ದು ಕೇವಲ ಪೋಷಕ ಪಾತ್ರ: ಸಂಸದ ಪ್ರತಾಪ್‌ ಸಿಂಹ

Exit mobile version