Site icon Vistara News

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

MUDA site scandal

ಬೆಂಗಳೂರು: ಮುಡಾ ಸೈಟ್ ಅಕ್ರಮದ (MUDA site scandal) ತನಿಖೆ ಮಾಡಲು ತನಿಖಾ ತಂಡ ರಚನೆ ಮಾಡಲಾಗಿದೆ. ಈ ಹಿಂದೆ ಬಿಜೆಪಿಯವರು, ನಾವು ಕೇಳಿದಾಗ ಒಂದೇ ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ಯಾಕೆ ನಾವು ಯಾಕೆ ಸಿಬಿಐಗೆ ಕೊಡಬೇಕು? ಸೈಟ್ ಹಂಚಿದ್ದು ಅವರ ಸರ್ಕಾರದಲ್ಲಿ, ದುರುಪಯೋಗ ಆಗಿದೆ ಅಂತ ಈಗ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಇಷ್ಟಕ್ಕೂ ನಾನು ಯಾಕಪ್ಪ ರಾಜೀನಾಮೆ ಕೊಡಬೇಕು, ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳ್ತಾನೆ ಅಂತ ಕೊಟ್ಟು ಬಿಡೋಕೆ ಆಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಪಕ್ಷ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣ ಸಿಬಿಐಗೆ ಹಸ್ತಾಂತರ ಮಾಡಲು ಒತ್ತಾಯದ ಬಗ್ಗೆ ಮಾತನಾಡಿ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.

ಇದನ್ನೂ ಓದಿ | Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

Exit mobile version