ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ (Multi-Specialty Hospital) ತ್ವರಿತವಾಗಿ ನಿರ್ಮಾಣವಾಗಬೇಕೆಂಬ ಜಿಲ್ಲೆಯ ಜನರ ಹೋರಾಟ ಸರ್ಕಾರವನ್ನು ತಲುಪಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲೆಯ ಜನತೆ ನಡೆಸಿದ ಆಂದೋಲನ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಒಬ್ಬರ ಹಿಂದೆ ಒಬ್ಬರಂತೆ ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡಲಾರಂಭಿಸಿದ್ದಾರೆ.
ಉತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ಸೂಚಿಸಿದ ಬೆನ್ನಲ್ಲೇ ಜಿಲ್ಲೆಯವರೇ ಆದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಟ್ವೀಟ್ ಮಾಡಿದ್ದು, ಈ ಸಂಬಂಧ ಜಿಲ್ಲೆಯ ಎಲ್ಲ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸಂಸದರೊಂದಿಗೆ ಸಭೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಪ್ರಕಟಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಉತ್ತರ ಕನ್ನಡ ಜಿಲ್ಲೆಗೆ ಅತೀ ಶೀಘ್ರದಲ್ಲಿ ಸುಸಜ್ಜಿತ ಹೈಟೆಕ್ ಆಸ್ಪತ್ರೆ ಮಂಜೂರು ಮಾಡಿಸಲಾಗುವುದು ಎಂದು ಟ್ವೀಟ್ ಮಾಡಿರುವ ಅವರು ಈಗಾಗಲೇ ಆರೋಗ್ಯ ಸಚಿವ ಡಾ. ಸುಧಾಕರ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಈ ಹೋರಾಟಕ್ಕೆ ಪ್ರತಿಕ್ರಿಯಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ; “ಉತ್ತರ ಕನ್ನಡ ಜಿಲ್ಲೆಯ ಹೃದಯ ಭಾಗದ ಕುಮಟಾದ ಆಸುಪಾಸಿನಲ್ಲಿ ಸದ್ಯದಲ್ಲೇ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದೇವೆ. ಎಲ್ಲರ ಸಹಕಾರವಿರಲಿʼʼ ಎಂದು ಕೋರಿದ್ದರು.
ಈಗಾಗಲೇ ಜಿಲ್ಲೆಗೆ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ (Multi specialty) ಅಗತ್ಯತೆಯ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರೋಗ್ಯ ಸಚಿವ ಸುಧಾಕರ್ ಅವರಿಗೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವ ಸುಧಾಕರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಇಂದೊಂದು ವಿಶೇಷ ಅತ್ಯಗತ್ಯ ಪ್ರಕರಣವಾಗಿ ಪರಿಗಣಿಸಿ ಶೀಘ್ರದಲ್ಲಿಯೇ ಆಸ್ಪತ್ರೆ ನಿರ್ಮಿಸಲು ಅಗತ್ಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಉಕ ಜಿಲ್ಲೆಯ ಜನರ ಹೋರಾಟಕ್ಕೆ ಟ್ವಿಟ್ಟರ್‌ನಲ್ಲಿ ಬೆಂಬಲ ಸೂಚಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸ್ಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆʼʼ ಎಂದಿದ್ದರು.
ಮೂರು ವರ್ಷಗಳ ಹಿಂದೆಯೇ ಭರವಸೆ!
ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಬೇಕೆಂದು ಜಿಲ್ಲೆಯ ಜನತೆ ಸುಮಾರು ಒಂದು ದಶಕದಿಂದ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಮೂರು ವರ್ಷಗಳ ಹಿಂದೆಯೂ ಇದೇ ರೀತಿಯಾಗಿ ಜಿಲ್ಲೆಯ ಜನತೆ ಒಗ್ಗಟ್ಟಿನಿಂದ ಒತ್ತಾಯಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಆಗಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ” ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಟ್ವೀಟ್ ಮಾಡಿದ್ದರು. ಇದರ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.
ಈ ಹೋರಾಟದ ಕುರಿತು ʻವಿಸ್ತಾರ ನ್ಯೂಸ್ʼ ಶನಿವಾರ Multi-Specialty Hospital | ರಾಜ್ಯಕ್ಕೆ ಬೆಳಕು ಕೊಟ್ಟ ಉತ್ತರ ಕನ್ನಡಕ್ಕೆ ಇಲ್ಲ ಆರೋಗ್ಯದ ಬೆಳಕು ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಪ್ರಕಟಿಸಿತ್ತು.