Site icon Vistara News

ಮುರುಘಾಶ್ರೀ ಪ್ರಕರಣ | ಮುರುಘಾ ಶರಣರಿಗೆ ಸಿಗದ ಜಾಮೀನು; ನಾಳೆಗೆ ಅರ್ಜಿ ಮುಂದೂಡಿಕೆ

Murugha Seer

ಚಿತ್ರದುರ್ಗ: ಶ್ರೀಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆಯು ಶನಿವಾರಕ್ಕೆ (ಸೆ.೧೭) ಮುಂದೂಡಿಕೆಯಾಗಿದೆ.

ಚಿತ್ರದುರ್ಗ ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಯು ಶುಕ್ರವಾರ ಇತ್ತು. ಈ ವೇಳೆ ಈ ಪ್ರಕರಣದ ವಿಚಾರಣೆಯನ್ನು ಸೆ.೧೭ರ ಶನಿವಾರಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.

ರಶ್ಮಿ ಜಾಮೀನು ಅರ್ಜಿಯೂ ಮುಂದೂಡಿಕೆ
2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನೂ ನ್ಯಾಯಾಲಯವು ಶನಿವಾರಕ್ಕೆ ಮುಂದೂಡಿದೆ. ಹೀಗಾಗಿ ಎರಡೂ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯು ಶನಿವಾರಕ್ಕೆ ಮುಂದೂಡಲ್ಪಟ್ಟಿದ್ದು, ಕುತೂಹಲ ಮೂಡಿಸಿದೆ.

ಇದನ್ನೂ ಓದಿ | ಮುರುಘಾಮಠದಲ್ಲಿ ಮತ್ತೊಂದು ಅವಾಂತರ, ಈ ಬಾರಿ ಹುಡುಗರ ಹಾಸ್ಟೆಲ್‌ನಿಂದ ಇಬ್ಬರು ಬಾಲಕರು ನಾಪತ್ತೆ

೧೪ ದಿನ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀ
ಸೆಪ್ಟೆಂಬರ್‌ ೧೪ಕ್ಕೆ ಶ್ರೀ ಶಿವಮೂರ್ತಿ ಮುರುಘಾಶರಣರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರ ಹಿನ್ನೆಲೆಯಲ್ಲಿ ಬುಧವಾರ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ವಾದ-ಪ್ರತಿವಾದ ಆಲಿಸಿದ್ದ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯವು ಶ್ರೀಗಳಿಗೆ ಜಾಮೀನು ನೀಡದೆ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ೧೪ ದಿನ ವಿಸ್ತರಿಸಿ ಆದೇಶ ನೀಡಿತ್ತು. ಇದರನ್ವಯ ಶ್ರೀಗಳು ಸೆಪ್ಟೆಂಬರ್‌ ೨೭ರವರೆಗೆ ಜೈಲಿನಲ್ಲಿಯೇ ಇರಬೇಕಾಗಿದೆ.

ಏನಿದು ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು.

ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿಗಳ ಬಳಿಗೆ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರಿಸುವ ಔಷಧ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದೂ ಹೇಳಲಾಗಿತ್ತು.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, ಇನ್ನೂ 14 ದಿನ ಜೈಲೇ ಗತಿ

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಕೊನೆಗೆ ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧಿಸಲಾಯಿತು. ಬಳಿಕ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಂಧಿಸಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಯಿತು. ಈ ನಡುವೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟಿದ್ದಾರೆ.

Exit mobile version