ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ 2ನೇ ಫೋಕ್ಸೋ ಪ್ರಕರಣದಲ್ಲಿ ಶ್ರೀಗಳಿಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ನೀಡಿದೆ.
ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಅ.13ರಂದು ಪ್ರಕರಣ ದಾಖಲಾಗಿತ್ತು. ಅ.14ಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಮೊದಲನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಜೈಲಿನಲ್ಲಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ೨ನೇ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ೮ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.
ಆದರೆ, ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಮುರುಘಾ ಶರಣರ ಪರ ವಕೀಲರು ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲವು, ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದು, ನವೆಂಬರ್ ೫ರವರೆಗೆ ವಿಚಾರಣೆ ನಡೆಸಲು ಅನುಮತಿ ನೀಡಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮೊದಲನೇ ಲೈಂಗಿಕ ದೌರ್ಜನ್ಯ ಕೇಸ್‌ನ ನಾಲ್ಕನೇ ಆರೋಪಿ ಅರೆಸ್ಟ್
ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ
ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ಆರಂಭವಾಗಿದೆ. ಇದಕ್ಕೂ ಮೊದಲು ಮುರುಘಾ ಶ್ರೀಗಳನ್ನು ಕೋರ್ಟಿನಿಂದ ಜಿಲ್ಲಾಸ್ಪತ್ರೆಗೆ ಕರೆದೊಯ್ದ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಅಲ್ಲಿಂದ ಚಿತ್ರದುರ್ಗ ಡಿವೈಎಸ್‌ಪಿ ಕಚೇರಿಗೆ ಕರೆದೊಯ್ದರು. ಡಿವೈಎಸ್‌ಪಿ ಕಚೇರಿಯಲ್ಲಿ ಎಸ್‌ಪಿ ಕೆ. ಪರಶುರಾಮ್, ಎಎಸ್‌ಪಿ ಕುಮಾರಸ್ವಾಮಿ, ಸಿಪಿಐ ಬಾಲಚಂದ್ರ ನಾಯ್ಕ್ ಅವರಿಂದ ಮುರುಘಾಶ್ರೀಗಳನ್ನು ವಿಚಾರಣೆ ಮಾಡಲಾಗುತ್ತಿದೆ.
ಒಂದನೇ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ನ.೮ ವರೆಗೆ ನ್ಯಾಯಾಂಗ ಬಂಧನ
ಆಗಸ್ಟ್ ೨೭ರಂದು ದಾಖಲಾಗಿದ್ದ ಮೊದಲನೇ ಲೈಂಗಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುರುಘಾ ಶರಣರಿಗೆ ನವೆಂಬರ್ ೮ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಪ್ರಕರಣದ ಪ್ರಮುಖ ಆರೋಪಿ ಮುರುಘಾಶ್ರೀ, ಎರಡನೇ ಆರೋಪಿ ಲೇಡಿ ವಾರ್ಡನ್ ರಶ್ಮಿ ಹಾಗೂ ಮೂರನೇ ಆರೋಪಿ ಆಪ್ತ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೊಂಡಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮಾದಿಗ ಯುವಸೇನೆ ರಾಜ್ಯಾಧ್ಯಕ್ಷ ಗಂಗಾಧರಯ್ಯ ಮೇಲೆ ಹಲ್ಲೆ; ಬಸವರಾಜನ್ ಬೆಂಬಲಿಗರ ಕೃತ್ಯ?
ಪ್ರಕರಣದ ಸಾರಾಂಶ
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಮುರುಘಾಶರಣರು ಜೈಲಿನಲ್ಲಿ ಇರುವ ಬೆನ್ನಲ್ಲೇ ಶುಕ್ರವಾರ (ಅ.೧೪) ಮೈಸೂರಲ್ಲಿ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲು ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಸಿಡಬ್ಲ್ಯೂಸಿ ಅಧಿಕಾರಿಗಳು ಆಕೆಯ ಹಾಗೂ ಒಬ್ಬಳು ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದೂ ಸಹ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದರು.
ಈ ಸಂಬಂಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 7 ಮಂದಿ ಮೇಲೆ ಕೇಸ್ ಹಾಕಲಾಗಿತ್ತು. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬ ಇಬ್ಬರ ಮೇಲೆ ಹೊಸದಾಗಿ ಎಫ್‌ಐಆರ್ ದಾಖಲಾದಂತಾಗಿತ್ತು.
ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.
ಏನಿದು ಮೊದಲ ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.
ಬಂಧನದ ಬಳಿಕ
ಆಗಸ್ಟ್ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.
ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ನೀಲಕಂಠೇಶ್ವರ ದೇಗುಲದಲ್ಲಿ ಮುರುಘಾಶರಣರ ಫೋಟೊ ತೆರವು