ಬೆಂಗಳೂರು: ಚಿತ್ರದುರ್ಗ ಮುರುಘಾಮಠ ಶ್ರೀಗಳ (Murugha Seer) ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ (ಎಸ್‌ಜೆಎಂ) ಪೀಠಾಧಿಪತಿ ಬಂಧನವಾಗಿದ್ದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಮಠದ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: Opposition Unity: ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆಯನ್ನು ಭೇಟಿ ಮಾಡಲಿದ್ದಾರೆ ಬಿಹಾರ ಸಿಎಂ ನಿತೀಶ್
ಸರ್ಕಾರದ ಆದೇಶ ಪ್ರಶ್ನಿಸಿ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮನವಿಯನ್ನು ಪುರಸ್ಕರಿಸಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ನ್ಯಾಯಪೀಠವು ರಾಜ್ಯ ಸರ್ಕಾರದ ಆದೇಶವನ್ನು ರದ್ದು ಪಡಿಸಿದೆ.
ನೇಮಕ ಅಧಿಕಾರ ಸರ್ಕಾರಕ್ಕೆ ಇಲ್ಲ
ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈ ಆದೇಶವನ್ನು ನೀಡಿದ್ದು, ಮಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಮಠ ಮತ್ತು ಶೈಕ್ಷಣಿಕ ಆಡಳಿತ ನಿರ್ವಹಣೆಗೆ ಯೋಜನೆ ರೂಪಿಸಲು ಮಠದ ಭಕ್ತಾದಿಗಳು ಮತ್ತು ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರು ನಿರ್ಧರಿಸಬಹುದು ಎಂದೂ ಹೇಳಿದೆ.
ನಾಲ್ಕು ವಾರದವರೆಗೆ ಮುಂದುವರಿಯಬಹುದು
ಇಂತಹ ಸಮಸ್ಯೆಗಳು ಉದ್ಭವಿಸಿದಾಗ ನಾಲ್ಕು ವಾರದವರೆಗೆ ಸರ್ಕಾರ ನೇಮಿಸಿದ ಆಡಳಿತಾಧಿಕಾರಿ ಮುಂದುವರಿಯಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇದರಿಂದ ಕೂಡಲೇ ಮಠದ ಚುಕ್ಕಾಣಿ ಮುರುಘಾ ಶರಣರ ಸುಪರ್ದಿಗೆ ಹೋಗುವುದು ತಪ್ಪಿದಂತಾಗಿದೆ.
ಇದನ್ನೂ ಓದಿ: Assembly session : 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ, 2 ದಿನ ಶಾಸಕರ ಪ್ರಮಾಣ
ಸರ್ಕಾರದ ಆದೇಶದಲ್ಲೇನಿತ್ತು?
2022ರ ಡಿಸೆಂಬರ್ 13ರಂದು ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಸದರಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಥೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಟಿಯಿಂದ ಪಿ.ಎಸ್.ವಸ್ತ್ರದ್ ಅವರನ್ನು ಮುಂದಿನ ಆದೇಶದವರೆಗೆ ಸದರಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳತಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಸರ್ಕಾರ ಆದೇಶವನ್ನು ಹೊರಡಿಸಿತ್ತು. ಈಗ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.