Site icon Vistara News

Mysore Dasara 2024: ಅ.3ರಿಂದ ಮೈಸೂರು ದಸರಾ ಅದ್ಧೂರಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ-2024 (Mysore Dasara 2024) ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಸೋಮವಾರ ನಡೆದಿದೆ. ಈ ಬಾರಿ ಅಕ್ಟೋಬರ್ 3ರಿಂದ 12ರವರೆಗೆ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ದಸರಾ 2024 ಉನ್ನತ ಮಟ್ಟದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಮಹದೇವಪ್ಪ, ಸಚಿವರಾದ ಕೆ.ವೆಂಕಟೇಶ್, ಕೆಜೆ ಜಾರ್ಜ್‌, ಹಿರಿಯ ಶಾಸಕ ಜಿಟಿ ದೇವೇಗೌಡ ಸೇರಿ ಮೈಸೂರು-ಕೊಡಗು, ಚಾಮರಾಜನಗರ ಭಾಗದ ಶಾಸಕರು, ಎಂಎಲ್‌ಸಿಗಳು ಭಾಗಿಯಾಗಿದ್ದರು.

ಸಭೆ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಉಸ್ತುವಾರಿ ಸಚಿವ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಾರಿ ಅಕ್ಟೋಬರ್ 3ರಿಂದ 12ರವರೆಗೆ ಅದ್ಧೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅ.3ರಂದು ದಸರಾ ಉದ್ಘಾಟನೆ ನಡೆಯಲಿದೆ, 12 ರಂದು ಜಂಬೂಸವಾರಿ ನಡೆಯಲಿದೆ. ಯಾರಿಂದ ಉದ್ಘಾಟನೆ ಮಾಡಿಸಬೇಕು ಎಂದು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕಳೆದ ಬಾರಿ ಬರಗಾಲದ ಕಾರಣ ಅದ್ಧೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಲಾಗಿದೆ.

ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ಆಗಸ್ಟ್‌ 21 ರಂದು ಬೆಳಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್‌ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್‌ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್‌, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ದತೆಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು KSRTC ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್‌ ರೂಪಿಸಲಾಗುವುದು ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ ಎಂದು ಹೇಳಿದರು.

ಈ ಬಾರಿ 21 ದಿನಗಳ ಕಾಲ ದೀಪಾಲಂಕಾರ

ವಿಜೃಂಭಣೆಯ ದಸರಾ ಆಚರಣೆಗೆ ಎಷ್ಟು ಬೇಕೋ ಅಷ್ಟು ಅನುದಾನ ಸರ್ಕಾರ ನೀಡಲಿದೆ. ಕಳೆದ ಬಾರಿ 30 ಕೋಟಿ ಖರ್ಚು ಆಗಿತ್ತು, ಈ ಬಾರಿ ಅದಕ್ಕಿಂತ ಹೆಚ್ಚು ಆಗಬಹುದು. ವಸ್ತು ಪ್ರದರ್ಶನದಲ್ಲಿ ಸರ್ಕಾರದ ಸಾಧನೆಗಳನ್ನು ಬಿಂಬಿಸಲು ಸೂಚನೆ ನೀಡಲಾಗಿದೆ. ಈ ಬಾರಿ 21 ದಿನಗಳ ಕಾಲ ದೀಪಾಲಂಕಾರ ಇರಲಿದೆ. ಪ್ರವಾಸಿಗರು ಬಂದಾಗ ಸರಿಯಾದ ರೀತಿಯಲ್ಲಿ ಅವರಿಗೆ ಮಾರ್ಗದರ್ಶನ ಮತ್ತೆ ಭದ್ರತೆ ಹಾಗೂ ಟ್ರಾಫಿಕ್ ನಿಭಾಯಿಸಲು ಸೂಚನೆ ಕೊಟ್ಟಿದ್ದೇನೆ. ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್ ಕೂಡ ಇರಲಿದ್ದು, ಉಳಿದವರಿಗೆ ಉಚಿತವಾಗಿ ದಸರಾ ನೋಡಲು ಅವಕಾಶ ಇರುತ್ತದೆ. ಒಟ್ಟಾರೆ ನಾಡ ಹಬ್ಬ ಹಾಗೂ ಜನರ ಉತ್ಸವವಾಗಿ ಇರಬೇಕು. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸ್ಥಳೀಯ ಕಲೆ, ಪ್ರತಿಭೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ

ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.
ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು. ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ ಎಂದು ಸಿಎಂ ಸೂಚಿಸಿದ್ದಾರೆ.

ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ. ಗೋಲ್ಡ್ ಕಾರ್ಡ್‌ಗಳನ್ನು ಮುಂಚಿತವಾಗಿ ವಿತರಣೆ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ಕರ್ನಾಟಕ ಸಂಭ್ರಮ 50 ನವೆಂಬರ್‌ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ | Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

ಪ್ರಮೋದಾ ದೇವಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ನಾವು ಕಾನೂನು ಮಾಡಿದ್ದೇವೆ. ಆದರೆ ಪ್ರಮೋದಾ ದೇವಿಯವರು ಕೋರ್ಟ್‌ಗೆ ಹೋಗಿ ಸ್ಟೇ ತಗೊಂಡು ಬಂದಿದ್ದಾರೆ. ಮುಂದೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ ಎಂದರು.

Exit mobile version