ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.
ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.
ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.