Site icon Vistara News

Karnataka Police : ರಾಜಕೀಯ ಶಕ್ತಿ ಎಷ್ಟೇ ಇದ್ದರೂ ದ್ವೇಷಕಾರರ ಮಟ್ಟ ಹಾಕಿ: ಸಿಎಂ ಸಿದ್ದರಾಮಯ್ಯ

CM Siddaramaiah in Karnataka Police academy programme at mysore

ಮೈಸೂರು: ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು (Constitutional Right) ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್‌ಪಿ ಮತ್ತು ಅಬಕಾರಿ ಡಿವೈಎಸ್‌ಪಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ. ಅಲ್ಲದೆ, ರಾಜಕೀಯ ಶಕ್ತಿ ಎಷ್ಟೇ ಇದ್ದರೂ ದ್ವೇಷ ಕಾರುವವರನ್ನು ಮಟ್ಟ ಹಾಕಿ ಎಂದು ಕರ್ನಾಟಕ ಪೊಲೀಸ್ (Karnataka Police) ಅಕಾಡೆಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು (Deputy Superintendent of Probationary Police) ಮತ್ತು ಅಬಕಾರಿ ಉಪಾಧೀಕ್ಷಕರು (Deputy Superintendent of Excise) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಢ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲ ತರಬೇತಿ ಪಡೆದು ಪ್ರಯೋಜನ ಆಗುವುದಿಲ್ಲ. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಅತ್ಯಂತ ಕಡಿಮೆ ಇದೆ. ಇದು ಸರಿಯಾಗಬೇಕಿದೆ ಎಂದರು.

ಇದನ್ನೂ ಓದಿ: Cauvery water dispute : ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

CM Siddaramaiah in Karnataka Police academy programme

ರಾಜಕೀಯ ಶಕ್ತಿ ಇದ್ದರೂ ಮಟ್ಟ ಹಾಕಿ

ಸುಳ್ಳು ಮತ್ತು ದ್ವೇಷದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಅತ್ಯಂತ ನಿಷ್ಠುರವಾಗಿ ವರ್ತಿಸಿ ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ಸವಾಲು ನಿಮ್ಮ ಮೇಲಿದೆ. ದ್ವೇಷ ಕಾರುವವರಿಗೆ ಎಷ್ಟೇ ರಾಜಕೀಯ ಶಕ್ತಿ (Political Power) ಇದ್ದರೂ ಅವರನ್ನು ಮಟ್ಟ ಹಾಕದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಂತಿ-ಸುವ್ಯವಸ್ಥೆ ಇಲ್ಲದ ಸಮಾಜ, ನಾಡು, ದೇಶ ಅಭಿವೃದ್ಧಿ ಹೊಂದಲು, ಪ್ರಗತಿ ಪಥದಲ್ಲಿ ಮುಂದೆ ಸಾಗಲು ಸಾಧ್ಯವೇ ಇಲ್ಲ ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿಯಲ್ಲಿ ಉನ್ನತ ಪ್ರತಿಷ್ಠೆ ಗಳಿಸಿದೆ. ಇಲ್ಲಿ ಶಿಸ್ತಿನ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಸಾರ್ವಜನಿಕ ಜೀವನದಲ್ಲಿ ಇರುವವರೆಗೆ ನಾವು ಸಾಮಾಜಿಕ ಜವಾಬ್ದಾರಿ ಮೆರೆಯಬೇಕು. ಜನಸ್ನೇಹಿಗಳಾಗಿರುವುದನ್ನು ಮರೆಯಬಾರದು. ಜನರ ಕಷ್ಟಗಳನ್ನು ಆಲಿಸುವ ಮತ್ತು ಪರಿಹಾರ ಹುಡುಕುವ ತಾಳ್ಮೆ ಇಟ್ಟುಕೊಂಡವರು ಮಾತ್ರ ಸಾರ್ವಜನಿಕ‌ ಜೀವನದಲ್ಲಿರುವ ಅರ್ಹತೆ ಪಡೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: Cauvery water dispute : ಸರ್ಕಾರದ ನಿಲುವನ್ನು ಹೇಳುವವರೆಗೆ ಕಾಯುತ್ತೇನೆ: ಎಚ್.ಡಿ. ದೇವೇಗೌಡ

ತಾಳ್ಮೆ ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಿ

ಜನರು ನಿಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ. ಪೊಲೀಸರು ಅನೇಕ ಸಂದರ್ಭಗಳಲ್ಲಿ ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. ಎಂಥದ್ದೇ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ ಕರ್ತವ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು.

Exit mobile version