Site icon Vistara News

‌Nalin kumar Kateel: ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ; ಯು ಟರ್ನ್‌ ಹೊಡೆದ ನಳಿನ್‌ ಕಟೀಲ್‌

Nalin kumar Kateel

#image_title

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ (BJP State president) ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಬಳ್ಳಾರಿಯಲ್ಲಿ ಹೇಳಿಕೆ ನೀಡಿದ ಬೆನ್ನಿಗೇ ಯು ಟರ್ನ್‌ ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮ ಪತ್ರ ರವಾನಿಸಿದ್ದೇನೆ ಎಂದು ಹೇಳಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆಯೇ ತರಾತುರಿಯಲ್ಲಿ ಸ್ಪಷ್ಟನೆ ನೀಡಿ ನಾನು ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಅಧಿಕಾರಾವಧಿ ಮುಕ್ತಾಯಗೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯ ನೈತಿಕ ಹೊಣೆ ಹೊತ್ತು ನಾನು ರಾಜೀನಾಮೆ ನೀಡಿದ್ದೇನೆ. ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ರವಾನಿಸಿದ್ದೇನೆ. ಜತೆಗೆ ಮೌಖಿಕವಾಗಿಯೂ ತಿಳಿಸಿದ್ದೇನೆ. ಶೀಘ್ರವೇ ಹೊಸದಾಗಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಹೇಳಿದ್ದರು.

2019ರ ಆಗಸ್ಟ್‌ 20ರವರೆಗೆ ಬಿ.ಎಸ್‌. ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಸಮ್ಮಿಶ್ರ ಸರ್ಕಾರ ಪತನಗೊಂಡು ಅವರು ಮುಖ್ಯಮಂತ್ರಿಯಾದಾಗ ಆ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ನೇಮಿಸಲಾಗಿತ್ತು. ಅವರ ಮೂರು ವರ್ಷಗಳ ಅಧಿಕಾರಾವಧಿ 2022ರ ಆಗಸ್ಟ್‌ 20ಕ್ಕೆ ಮುಕ್ತಾಯಗೊಂಡಿತ್ತು. ಆ ಹಂತದಲ್ಲೇ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದ್ದರೂ ಚುನಾವಣೆಗೆ ಹೋಗುವ ಹಂತದಲ್ಲಿ ಬದಲಾವಣೆ ಬೇಡ ಎಂಬ ಕಾರಣಕ್ಕಾಗಿ ಅವರನ್ನೇ ಮುಂದುವರಿಸಲಾಗಿತ್ತು. ಇದೀಗ ಚುನಾವಣೆಯಲ್ಲಿ ಪಕ್ಷ ಸೋಲು ಕಂಡಿದೆ. ಇದರಿಂದಾಗಿ ಅವರನ್ನು ಎರಡನೇ ಅವಧಿಗೆ ಮುಂದುವರಿಸುವ ಸಾಧ್ಯತೆಗಳು ಇಲ್ಲ. ಹೀಗಾಗಿ ಅವರು ರಾಜೀನಾಮೆ ನೀಡಿ ಹೊಸ ಆಯ್ಕೆಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ಅವರ ಹೇಳಿಕೆಯನ್ನು ವ್ಯಾಖ್ಯಾನಿಸಲಾಗಿತ್ತು.

ಇದನ್ನೂ ಓದಿ: BJP Karnataka: 100 ದಿನ ಅವಕಾಶ ಕೊಡಿ ನಾನೇನು ಅಂತ ತೋರಿಸ್ತೀನಿ: ರಾಜ್ಯ ಬಿಜೆಪಿ ಅಧ್ಯಕ್ಷರಾಗಲು ವಿ. ಸೋಮಣ್ಣ ರೆಡಿ

ನಾನು ರಾಜೀನಾಮೆ ಕೊಟ್ಟಿಲ್ಲ ಎಂದ ನಳಿನ್‌ ಕುಮಾರ್‌ ಕಟೀಲ್‌

ಆದರೆ, ಒಮ್ಮಿಂದೊಮ್ಮೆಗೇ ಬಿಜೆಪಿ ಪಕ್ಷದ ಕಚೇರಿಯಿಂದಲೇ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು ʻʻನನ್ನ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ನಾನು ರಾಜೀನಾಮೆ ನೀಡಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

#image_title

ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

Exit mobile version