Site icon Vistara News

ಬಡವರಿಗೆ ಅನುಕೂಲವಾದರೆ ಅಕ್ರಮ-ಸಕ್ರಮ ಯೋಜನೆಗೆ ಆಕ್ಷೇಪವಿಲ್ಲ: ಸಿಎಂಗೆ ನಮ್ಮ ಬೆಂಗಳೂರು ಪ್ರತಿಷ್ಠಾನ ಪತ್ರ

ನಮ್ಮ ಬೆಂಗಳೂರು ಪ್ರತಿಷ್ಠಾನ

ಬೆಂಗಳೂರು: ನಗರದಲ್ಲಿರುವ ಅಕ್ರಮ ಮನೆ ಮತ್ತು ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಅಕ್ರಮ-ಸಕ್ರಮ ಯೋಜನೆಯಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾದರೆ, ಯೋಜನೆ ಅನುಷ್ಠಾನಕ್ಕೆ ನಮಗೆ ಯಾವುದೇ ಆಕ್ಷೇಪಗಳಿಲ್ಲ ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನ ತಿಳಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಅವರಿಗೆ ಪತ್ರ ಬರೆದಿರುವ ನಮ್ಮ ಬೆಂಗಳೂರು ಪ್ರತಿಷ್ಠಾನದ ವ್ಯವಸ್ಥಾಪಕ ನಿರ್ದೇಶಕ ವಿನೋದ್‌ ಜೇಕಬ್‌ ಅವರು, ಅಕ್ರಮ-ಸಕ್ರಮ ಯೋಜನೆಯಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗಬೇಕು. ಆದರೆ ಇದರಿಂದ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಗೆ ಪ್ರಯೋಜನವಾಗದಂತೆ ನೋಡಿಕೊಳ್ಳಬೇಕು. ರಾಜ್ಯ ಸರ್ಕಾರ ಈ ಬಗ್ಗೆ ತನ್ನ ನಿಲುವನ್ನು ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ.

ಅಕ್ರಮ ಸಕ್ರಮದ ಬಗ್ಗೆ ಹಲವರು ತಮ್ಮ ಜತೆ ಸಮಸ್ಯೆಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರೊಂದಿಗೂ ನಾವು ಚರ್ಚಿಸಿದ್ದೇವೆ. ಅಕ್ರಮ-ಸಕ್ರಮ ಯೋಜನೆಯಿಂದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗಬೇಕು. ಆದರೆ, ಕಾನೂನು ಬಾಹಿರವಾಗಿ ಕಟ್ಟಡ ಹಾಗೂ ನಿವೇಶನ ನಿರ್ಮಿಸಿರುವ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾದರೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ನಾವು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.

2016ರಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಕ್ರಮ ಸಕ್ರಮದ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ನಮ್ಮ ಬೆಂಗಳೂರು ಪ್ರತಿಷ್ಠಾನ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು, ಹೀಗಾಗಿ ಯೋಜನೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ | ಕಾರವಾರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಗೋವಾ ಮದ್ಯ ವಶ

Exit mobile version