Site icon Vistara News

Narendra Modi: ಸಿಎಂ ಸಿದ್ದು ಕುರ್ಚಿ ಸೇಫಲ್ಲ; ಭಾರಿ ಚರ್ಚೆಗೆ ಗ್ರಾಸವಾದ ಮೋದಿ ಹೇಳಿಕೆ!

PM Narendra Modi and CM Siddaramaiah

Narendra Modi Jibe On Karnataka Chief Minister's Tenure; Heavy Discussion Over The Claim

ಬೆಂಗಳೂರು: “ಕರ್ನಾಟಕದ ಮುಖ್ಯಮಂತ್ರಿಗೆ ಅವರು ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ ಎಂಬುದೇ ಗೊತ್ತಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಈಗ ಸಂಚಲನ ಮೂಡಿಸಿದೆ. ಇದುವರೆಗೆ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮಧ್ಯೆ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಮಾತ್ರ ಸಿಎಂ ಆಗಿ ಇರುತ್ತಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಎಂದು ಅವರ ಆಪ್ತರು ಸ್ಪಷ್ಟನೆ ನೀಡುತ್ತಿರುವ ಹೊತ್ತಿನಲ್ಲೇ ಮೋದಿ ನೀಡಿದ ಹೇಳಿಕೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಚರ್ಚೆಗೆ ಗ್ರಾಸವಾಗಿರುವುದೇಕೆ?

ಕರ್ನಾಟಕದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಅವರು ಪೂರ್ಣಾವಧಿಗೆ ಸಿಎಂ ಆಗಿರುವುದಿಲ್ಲ ಎಂದು ಸ್ವಪಕ್ಷದವರು ಹಾಗೂ ಪ್ರತಿಪಕ್ಷದ ನಾಯಕರು ಆರೋಪಿಸುತ್ತಿದ್ದರು. ಕೊನೆಗೆ, ಬಿ.ಎಸ್‌.ಯಡಿಯೂರಪ್ಪ ಅವರು ಅವಧಿ ಮುಗಿಯುವ ಮೊದಲೇ ರಾಜೀನಾಮೆ ನೀಡಿದರು. ಈಗ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ತಲೆದಂಡ ಆಗುತ್ತದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ಹೊತ್ತಿನಲ್ಲೇ ಮೋದಿ ಅವರೇ ಈ ರೀತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಅದರಲ್ಲೂ, ಮುಖ್ಯಮಂತ್ರಿ ಅವರ ಅಧಿಕಾರದ ಅವಧಿ ಕುರಿತು ನರೇಂದ್ರ ಮೋದಿ ಹೇಳಿಕೆಗೆ ಡಿ.ಕೆ. ಶಿವಕುಮಾರ್‌ ಅವರಿಂದ ಹಿಡಿದು ಯಾವ ನಾಯಕರು ಕೂಡ ಪ್ರತಿಕ್ರಿಯಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಇದ್ದೇವೆ ಎಂಬ ಮಾತುಗಳು, ಅವರೇ ಐದು ವರ್ಷ ಸಿಎಂ ಎಂಬ ಸ್ಪಷ್ಟನೆಗಳು ಬಂದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಆರು ತಿಂಗಳಾಗುತ್ತ ಬಂದರೂ ಬಿಜೆಪಿಯು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದೇ ಕಾಂಗ್ರೆಸ್‌ ತಿರುಗೇಟಾಗಿದೆಯೇ ಹೊರತು, ಯಾರು ಕೂಡ ಸಿದ್ದರಾಮಯ್ಯ ಅವರ ಪರ ಮಾತನಾಡಿಲ್ಲ. ಇವೆಲ್ಲ ಅಂಶಗಳು ಚರ್ಚೆಯನ್ನು ಹುಟ್ಟುಹಾಕಿವೆ.

ನರೇಂದ್ರ ಮೋದಿ ಹೇಳಿದ್ದೇನು?

ಮಧ್ಯಪ್ರದೇಶದ ಖಂಡ್ವಾದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದರು. “ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ರಾಜ್ಯವನ್ನು ಹಾಳು ಮಾಡಲಾಗಿದೆ. ಅಭಿವೃದ್ಧಿ ಎಂಬುದು ಮರೀಚಿಕೆ ಆಗಿದೆ. ಅದರಲ್ಲೂ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೆ ಎಂಬುದು ಅವರಿಗೇ ಗೊತ್ತಿಲ್ಲ. ರಾಜ್ಯವನ್ನು ಲೂಟಿ ಮಾಡಲು ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಮಧ್ಯೆ ಪೈಪೋಟಿ ಶುರುವಾಗಿದೆ” ಎಂದು ನರೇಂದ್ರ ಮೋದಿ ಹೇಳಿದ್ದರು.

ಇದನ್ನೂ ಓದಿ: CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ ಕೊಟ್ಟ ತಿರುಗೇಟು ಇದು

ನರೇಂದ್ರ ಮೋದಿ ಅವರು ಮಾಡಿದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ನರೇಂದ್ರ ಮೋದಿ ಅವರು ಹೇಳಿರುವುದೆಲ್ಲ ಸುಳ್ಳಿನ ಕಂತೆ. ಅವರು ಪ್ರಚಾರ ಮಾಡಿದಲ್ಲೆಲ್ಲ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ. 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ, ಪುರಾವೆಗಳು, ದಾಖಲೆಗಳಿಲ್ಲದೆ ಆರೋಪ ಮಾಡಬಾರದು” ಎಂದು ಕುಟುಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version