ಚಾಮರಾಜನಗರ: ಕೇರಳದಲ್ಲಿ ನಿಫಾ ವೈರಸ್ ಸೋಂಕಿಗೆ ಇಬ್ಬರು ಮೃತಪಟ್ಟಿರುವುದರಿಂದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಸೆ.14ರಿಂದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮನೆಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಗುಂಡ್ಲುಪೇಟೆ ತಾಲೂಕಿನ ಕಾಡಂಚಿನ 158 ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಅರೋಗ್ಯ ಇಲಾಖೆ ಸೂಚಿಸಿದೆ. ಇನ್ನು ಕೇರಳ-ಕರ್ನಾಟಕ ಗಡಿಯ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಹಂದಿ ಸೇರಿ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ವಿಶೇಷ ನಿಗಾ ಇಟ್ಟಿದ್ದು, ಗೂಡ್ಸ್ ವಾಹನಗಳಿಗೆ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ | Cauvery water dispute : ಕಾವೇರಿ ವಿಷಯದಲ್ಲಿ ಧರ್ಮಸಿಂಗ್, ಸಿದ್ದರಾಮಯ್ಯರ ದಾರಿ ತಪ್ಪಿಸಿದ್ದು ಸಾಲದೆ? ಮೊಯ್ಲಿಗೆ ಎಚ್‌ಡಿಕೆ ತಿರುಗೇಟು!
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಸೋಂಕು ವ್ಯಾಪಿಸುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಜ್ವರ ಸಮೀಕ್ಷೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ. ಇನ್ನು ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನಿಫಾ ಐಸೋಲೇಶನ್ ವಾರ್ಡ್ ಮೀಸಲಿರಿಸುವಂತೆ ಸೂಚಿಸಲಾಗಿದೆ. ಮೆದುಳು ಜ್ವರ, ನಿಫಾ ಲಕ್ಷಣಗಳು ಕಂಡುಬಂದರೆ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.