ಬೆಂಗಳೂರು: ರಾಜ್ಯದಲ್ಲೀಗ ಭಾರಿ ಸದ್ದು ಮಾಡುತ್ತಿರುವ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು (Muslim college) ಸ್ಥಾಪನೆಯ ಪ್ರಸ್ತಾಪದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಇಂಥಹುದೊಂದು ಪ್ರಸ್ತಾಪವೇ ಸರಕಾರದ ಮುಂದಿಲ್ಲ. ಯಾವ ಚರ್ಚೆಯೂ ಸರಕಾರದ ಮಟ್ಟದಲ್ಲಿ ನಡೆದಿಲ್ಲ ಎಂದು ಹೇಳಿದರು.
ವಕ್ಫ್ ಬೋರ್ಡ್ ಮೂಲಕ ರಾಜ್ಯದಲ್ಲಿ ೧೦ ಕಡೆ ಮುಸ್ಲಿಮ್ ಯುವತಿಯರಿಗಾಗಿಯೇ ಪ್ರತ್ಯೇಕ ಕಾಲೇಜು ಸ್ಥಾಪಿಸಲಾಗುವುದು, ಅತಿಶೀಘ್ರವೇ ಮೊದಲ ಕಾಲೇಜಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಗುರುವಾರ ಬೆಳಗ್ಗೆ ವಿಧಾನಸೌಧದ ಎದುರು ಮಾಧ್ಯಮಗಳ ಜತೆ ಮಾತನಾಡುತ್ತಾ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ ಎಂದರು.
ʻʻಪ್ರತ್ಯೇಕ ಕಾಲೇಜು ಬಗ್ಗೆ ನಮ್ಮ ಸರ್ಕಾರದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಇದು ನಮ್ಮ ಸರ್ಕಾರದ ನಿಲುವು ಕೂಡಾ ಆಗಿಲ್ಲ. ಇಂಥ ಯಾವುದಾದರೂ ಪ್ರಸ್ತಾವನೆ ಇದ್ರೆ ವಕ್ಫ್ ಬೋರ್ಡ್ ಅಧ್ಯಕ್ಷರೇ ಬಂದು ನನ್ನ ಜತೆ ಚರ್ಚೆ ಮಾಡಲಿʼʼ ಎಂದು ಹೇಳಿದರು.
ಏನಿದು ಮುಸ್ಲಿಂ ಯುವತಿಯರ ಪ್ರತ್ಯೇಕ ಕಾಲೇಜು?
ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಕ್ಫ್ ಬೋರ್ಡ್ ಸರಕಾರ ನೀಡುವ ಅನುದಾನದಲ್ಲಿ ಪ್ರತಿ ಕಾಲೇಜಿಗೆ ೨.೫ ಕೋಟಿ ರೂ. ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಸುದ್ದಿಯಾಗಿತ್ತು.
ಉಡುಪಿಯಲ್ಲಿ ಹಿಜಾಬ್ ವಿವಾದ ಉದ್ಭವಿಸಿದ ಬಳಿಕ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವಿಷಯವಾಗಿ ಬಹುತೇಕ ಮುಸ್ಲಿಂ ಸಂಘ, ಸಂಸ್ಥೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ಇದೀಗ ಚುನಾವಣೆಯ ಪರ್ವ ಕಾಲದಲ್ಲಿ ಸರ್ಕಾರವೇ ಮುತುವರ್ಜಿ ವಹಿಸಿ ಮುಸ್ಲಿಂ ಹೆಣ್ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಮುಂದಾಗಿದೆ ಎಂದು ಹೇಳಲಾಗಿತ್ತು. ಹಿಜಾಬ್ ವಿವಾದದ ಬಳಿಕ ರಾಜ್ಯಾದ್ಯಂತ ಸುಮಾರು ಏಳೆಂಟು ಸಾವಿರ ಮುಸ್ಲಿಂ ವಿದ್ಯಾರ್ಥಿನಿಯರು ಒಂದೋ ಶಿಕ್ಷಣದಿಂದಲೇ ವಿಮುಖರಾಗಿದ್ದಾರೆ, ಇಲ್ಲವೇ ಮುಸ್ಲಿಂ ಆಡಳಿತದ ಕಾಲೇಜುಗಳಿಗೆ ಹಾಗೂ ಹಿಜಾಬ್‌ಗೆ ಅವಕಾಶವಿರುವ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇಂಥವರಿಗೆ ಒಂದು ಸುರಕ್ಷಿತ ಅವಕಾಶವಾಗಿ ಕಾಲೇಜು ಸ್ಥಾಪನೆಗೆ ವಕ್ಫ್ ಮಂಡಳಿ ಮುಂದಾಗಿದೆ ಎನ್ನಲಾಗಿತ್ತು.
ಎಲ್ಲೆಲ್ಲಿ ಕಾಲೇಜು ಸ್ಥಾಪನೆ?
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ಜಾಗ ಗುರುತಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕದ ಕೆಲವೆಡೆ ಕಾಲೇಜು ಆರಂಭವಾಗಲಿದೆ ಎಂದು ಹೇಳಲಾಗಿತ್ತು.
ತೀವ್ರ ವಿರೋಧ ವ್ಯಕ್ತ
ಸರಕಾರ ವಕ್ಫ್ ಬೋರ್ಡ್ ಮೂಲಕ ಮುಸ್ಲಿಂ ಯುವತಿಯರಿಗಾಗಿಯೇ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಮುಂದಾಗಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರು ವಿರೋಧಿಸಿದ್ದಾರೆ. ಇದು ಮುಸ್ಲಿಮರನ್ನು ಪ್ರತ್ಯೇಕಗೊಳಿಸುವುದಲ್ಲದೆ, ಅರೇಬಿಕ್ ಶಿಕ್ಷಣ ಸಂಸ್ಥೆಗಳಂತೆ ಅಲ್ಲಿ ಏನು ನಡೆಯುತ್ತದೆ ಎಂದು ತಿಳಿಯದೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ, ಈಗ ಮುಖ್ಯಮಂತ್ರಿಗಳೇ ಈ ವಿಷಯ ಚರ್ಚೆಯಲ್ಲೇ ಇಲ್ಲ ಎಂದಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದಂತಾಗಿದೆ.
ಇದನ್ನೂ ಓದಿ | Muslim college | ರಾಜ್ಯದಲ್ಲಿ 10 ಮುಸ್ಲಿಂ ಕಾಲೇಜು ಸ್ಥಾಪನೆಗೆ ವಿರೋಧ: ಬಲಿದಾನವಾದ್ರೂ ಸರಿ ತಡೀತೀವಿ ಎಂದ ಮುತಾಲಿಕ್