Site icon Vistara News

BBMP Bill Payment : ಬ್ಲ್ಯಾಕ್‌ಮೇಲ್‌ಗೆಲ್ಲ ಬಗ್ಗಲ್ಲ, ಕೆಲಸ ಮಾಡಿದವರಿಗೆ ಮಾತ್ರ ಬಿಲ್‌ ಪಾವತಿ: ಡಿಕೆಶಿ

DK Shivakumar infront of BBMP Office regarding asking commission for BBMP Bill Payment

ಬೆಂಗಳೂರು: ಬಿಬಿಎಂಪಿಯಲ್ಲಿ ಕಳೆದ ಎರಡು ವರ್ಷಗಳಿಂದ ಮಾಡಿದ ಕಾಮಗಾರಿಗಳ ಬಿಲ್‌ ಪಾವತಿ (BBMP Bill Payment) ಮಾಡಲಾಗಿಲ್ಲ. ಕೇಳಿದರೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಕಮಿಷನ್‌ ಕೇಳುತ್ತಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರರ ನಿಯೋಗ (Delegation of BBMP contractors) ರಾಜ್ಯಪಾಲರಿಗೆ (Karnataka Governor) ದೂರು ನೀಡುತ್ತಿದ್ದಂತೆ, ಇತ್ತ ಡಿ.ಕೆ. ಶಿವಕುಮಾರ್‌ ಸಹ ಗರಂ ಆಗಿದ್ದು, ಇಂತಹ ಬ್ಲ್ಯಾಕ್‌ಮೇಲ್‌ಗಳಿಗೆಲ್ಲ ಈ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ ಎಂದು ಖಡಕ್‌ ಆಗಿ ಉತ್ತರಿಸಿದ್ದಾರೆ.

ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, “ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅಂತಲೂ ನನಗೆ ಗೊತ್ತಿದೆ. ನಾವು ಕಾನೂನು ಪ್ರಕಾರವಾಗಿ ಕೆಲಸ ಮಾಡುತ್ತಿದ್ದು, ಇಂತಹ ಬ್ಲ್ಯಾಕ್‌ಮೇಲ್‌ಗಳಿಗೆ ನಾನು ಬಗ್ಗುವುದಿಲ್ಲ ಎಂದು ಹೇಳಿದ್ದಾರೆ.

ಬಿಲ್ ಹಣ ಬಿಡುಗಡೆಗೆ ಕಮಿಷನ್‌ ಕೇಳಿಲ್ಲವೆಂದಾದರೆ ಅವರೇ ನಂಬಿರುವ ನೊಣವಿನಕೆರೆ ಅಜ್ಜಯ್ಯನ ಮೇಲೆ ಪ್ರಮಾಣ ಮಾಡಲಿ ಎಂದು ಗುತ್ತಿಗೆದಾರರು ಸವಾಲು ಹಾಕಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನಾನು ಯಾವುದೇ ಗುತ್ತಿಗೆದಾರರಿಗೆ ಉತ್ತರ ಕೊಡಲು ಹೋಗುವುದಿಲ್ಲ. ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕೀಯ ಗೊತ್ತಿದೆ. ಗುತ್ತಿಗೆದಾರರು ಗೊತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ, ಯಾರು ಇದನ್ನು ಹೇಳಿಸುತ್ತಿದ್ದಾರೆ ಎಂದೂ ಗೊತ್ತಿದೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಾವು ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ. ಈ ರೀತಿಯ ಬೆದರಿಕೆ, ಬ್ಲಾಕ್‌ಮೇಲ್‌ಗೆ ನಾನು ಜಗ್ಗುವುದಿಲ್ಲ. ರಾಜ್ಯಪಾಲರಿಗೆ ಪತ್ರ ಕೊಡೋದು, ರಾಷ್ಟ್ರಪತಿಗೆ ಪತ್ರ ಕೊಡೋದು, ಪ್ರಧಾನಿಗಳನ್ನು ಭೇಟಿ ಆಗೋದು ಏನ್‌ ಬೇಕಾದರೂ ಮಾಡಿಕೊಳ್ಳಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Minister Chaluvarayaswamy : ಕೃಷಿ ಸಚಿವ ಚಲುವರಾಯಸ್ವಾಮಿ ಮೇಲೆ ಲಂಚ ಆರೋಪ; ಸಿಐಡಿ ತನಿಖೆಗೆ ನಿರ್ಧಾರ

ನನಗೆ ಹೆದರಿಸೋಕೆ ಆಗುತ್ತಾ?

ನಿಮ್ಮ ಮೇಲೆ ಒತ್ತಡ ಹಾಕಲು ಈ ರೀತಿ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ನನಗೆ ಯಾವ ಒತ್ತಡ ಇದೆ, ಯಾರು ಒತ್ತಡ ಹಾಕುತ್ತಾರೆ, ಯಾರು ಹೆದರಿಸುತ್ತಾರೆ? ನನಗೆ ಹೆದರಿಸೋಕೆ ಆಗುತ್ತಾ? ಯಾವುದೇ ಒತ್ತಡ ಬರಲಿ, ಅದನ್ನು ತಡೆದುಕೊಳ್ಳುವ ಶಕ್ತಿ ನನಗಿದೆ. ಈ ಗುತ್ತಿಗೆದಾರರ ವಿಚಾರಕ್ಕೆಲ್ಲ ನಾನು ಪ್ರತಿಕ್ರಿಯೆ ನೀಡೋಕೆ ಹೋಗಲ್ಲ” ಎಂದು ಹೇಳಿದರು.‌

ಎಚ್‌ಡಿಕೆಯನ್ನು ಭೇಟಿ ಮಾಡಲಿ

ಗುತ್ತಿಗೆದಾರರು ಕುಮಾರಸ್ವಾಮಿ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದರು ಎಂಬ ಪ್ರಶ್ನೆಗೆ, “ಮಾಡಲಿ ಬಿಡಿ, ನಾವು ವಿರೋಧ ಪಕ್ಷದಲ್ಲಿ ಇದ್ದಿದ್ದರೆ, ನಮ್ಮನ್ನು ಕೂಡ ಭೇಟಿ ಮಾಡುತ್ತಿರಲಿಲ್ಲವೇ? ಇದನ್ನು ತಪ್ಪು ಎಂದು ಹೇಳಲು ಆಗುತ್ತದೆಯೇ? ಇದು ಅತ್ಯಂತ ಸಾಮಾನ್ಯ ಸಂಗತಿ. ರಾಜಕಾರಣಿಗಳು, ವಿರೋಧ ಪಕ್ಷಗಳು ಇರುವುದೇ ಇಂತಹ ಕೆಲಸ ಮಾಡೋಕೆ, ಮಾಡಲಿ ಬಿಡಿ” ಎಂದು ಡಿ.ಕೆ. ಶಿವಕುಮಾರ್ ಉತ್ತರಿಸಿದರು.

ಗುತ್ತಿಗೆದಾರರ ಗುಂಪೊಂದು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಏನಾದರೂ ಎತ್ತಿಕಟ್ಟಲಿ, ಏನು ಬೇಕಾದರೂ ಮಾಡಲಿ, ನಾನು ಯಾರಿಗೂ ಪ್ರಮಾಣ ಮಾಡಬೇಕಾಗಿಲ್ಲ. ಕಾನೂನು ಏನು ಹೇಳಿದೆಯೋ, ಅದೇ ಉತ್ತರ. ಕೆಲಸ ಮಾಡಿದ್ದರೆ ಬಿಲ್‌ ಕೊಡುತ್ತೇವೆ, ಕೆಲಸ ಮಾಡಲಿಲ್ಲ ಅಂದರೆ ಬಿಲ್‌ ಕೊಡುವುದಿಲ್ಲ. ಇವತ್ತು ಅರ್ಜಿ ಕೊಟ್ಟರು, ನಾಳೆ ಟೆಂಡರ್‌ ಆಯಿತು, ಒಂದು ತಿಂಗಳಲ್ಲಿ 1 ಸಾವಿರ ಕೋಟಿ ರೂ. ಕೆಲಸ ಮಾಡಲು ಆಗುತ್ತಾ ನೀವೇ ಹೇಳಿ. ಅಧಿಕಾರಿಗಳಿಗೆ ಹೇಳಿದ್ದೇವೆ, ಮೌಲ್ಯಮಾಪನ ಮಾಡಿ, ಕೆಲಸ ಆಗಿದ್ದರೆ ಬಿಲ್‌ ಮಾಡಿ ಎಂದು. ಅವರು ಆ ಕೆಲಸ ನೋಡಿಕೊಳ್ಳುತ್ತಾರೆ. ಸರ್ಕಾರ ಇರುವುದು ನೀತಿ ರೂಪಿಸಲು. ಹಾಗಾಗಿ ನಾವು ಬಿಲ್ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದರು.

ಈ ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ನಲವತ್ತು ಪರ್ಸೆಂಟ್‌ ಆರೋಪ ಮಾಡಿದ್ದ ನೀವು ಇದಕ್ಕೆ ಏನು ಹೇಳುತ್ತೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, “ಹೌದು ನಾವು ಆರೋಪ ಮಾಡಿದ್ದು ಸತ್ಯ, ತನಿಖೆಗೆ ಪತ್ರ ಕೊಟ್ಟಿದ್ದು, ತನಿಖೆ ಮಾಡುತ್ತಿರುವುದು, ಅಶ್ವತ್ಥನಾರಾಯಣ ತನಿಖೆ ಮಾಡಿ ಎಂದು ಹೇಳಿದ್ದು, ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗ ಬೊಮ್ಮಾಯಿ ಅವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದು, ಲೋಕಾಯುಕ್ತ ಅವರು 130 ಕೋಟಿ ರೂಪಾಯಿಯನ್ನು ಬಿಲ್‌ ಇಲ್ಲದೆ ಹಣ ಕೊಟ್ಟಿದ್ದಾರೆ ಎಂದು ವರದಿ ನೀಡಿರುವುದು, ಅಧಿಕಾರಿಗಳನ್ನು ಅಮಾನತು ಮಾಡಿರುವುದು ಎಲ್ಲವೂ ಸತ್ಯ, ಸತ್ಯ” ಎಂದು ಹೇಳಿದರು.

ಎಲ್ಲಿಂದ ಕೊಡುವುದು?

ಗುತ್ತಿಗೆದಾರರು ಬಿಜೆಪಿ ಮೇಲೆ ಆರೋಪ ಮಾಡಿದ್ದರು, ಈಗ ನಿಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, “ಗುತ್ತಿಗೆದಾರರು ನನ್ನ ಬಳಿಯೂ ಬಂದಿದ್ದರು, ಕೆಲಸ ಮಾಡಿದ್ದರೆ ನಿಮಗೆ ಹಣ ಸಿಗುತ್ತದೆ ಎಂದು ಅವರಿಗೆ ಹೇಳಿದೆ. ಬಿಲ್‌ ಕೊಡೋದಕ್ಕೂ ಒಂದು ಪ್ರಕ್ರಿಯೆ ಇದೆ. ಎರಡು, ಮೂರು ವರ್ಷ ಕಾದಿಲ್ಲವೇ ಅವರು? ಜಲಸಂಪನ್ಮೂಲ ಇಲಾಖೆಯಲ್ಲಿ ಇರುವುದು 600 ಕೋಟಿ ರೂ. ಆದರೆ 25 ಸಾವಿರ ಕೋಟಿ ಬಿಲ್‌ ಇದೆ. ಎಲ್ಲಿಂದ ಕೊಡುವುದು? ಕೆಲಸ ಮಾಡದವರಿಗೆಲ್ಲ ದುಡ್ದು ಕೊಡಲು ಆಗುತ್ತದೆಯೇ?” ಎಂದು ಮರು ಪ್ರಶ್ನಿಸಿದರು.

ಇದನ್ನೂ ಓದಿ: BBMP Bill Payment : ರಾಜ್ಯಪಾಲರ ಅಂಗಳಕ್ಕೆ ಬಿಬಿಎಂಪಿ ಬಿಲ್‌ ಗಲಾಟೆ; ಡಿಕೆಶಿ ವಿರುದ್ಧ ಕಮಿಷನ್ ದೂರು!

ಇಂದು ನಡೆದ ಬೆಂಗಳೂರು ಸಚಿವರು, ಶಾಸಕರ ಜತೆಗಿನ ಸಭೆ ಬಗ್ಗೆ ಕೇಳಿದಾಗ, “ಶಾಸಕರ ಕ್ಷೇತ್ರಗಳ ಸಮಸ್ಯೆಗಳು, ಕಳೆದ ಸರ್ಕಾರ ಮಾಡಿದ್ದ ತಾರತಮ್ಯಗಳ ಬಗ್ಗೆ ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಆರ್ಥಿಕ ಸ್ಥಿತಿ ಗಮನದಲ್ಲಿಟ್ಟುಕೊಂಡು ಯಾವ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.‌

Exit mobile version