Site icon Vistara News

R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

Opposition party leader r ashok latest statement in Bengaluru

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್‌ ಆಗಿರುವ ಸರ್ಕಾರ ಎಲ್ಲ ಕಡೆ ಬಿಲ್‌ ಪಾವತಿ ಬಾಕಿ ಇರಿಸಿಕೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು, ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Health Benefits of Mango Leaves: ಮಾವಿನೆಲೆಗಳು ತೋರಣ ಕಟ್ಟಲಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು!

ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತು ಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ ಎಂದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಸಹೋದರ ಡಿ.ಕೆ. ಸುರೇಶ್‌ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ಆರೋಪಿಸಿದರು.

ಕಸಕ್ಕೂ ತೆರಿಗೆ

ಈಗಾಗಲೇ ತೆರಿಗೆ ಭಾರದಿಂದ ಜನರು ಸುಸ್ತಾಗಿದ್ದಾರೆ. ಕಸಕ್ಕೂ ತೆರಿಗೆ ಹಾಕುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಮುಂದೆ ಹಾಲು, ಆಲ್ಕೋಹಾಲ್‌, ಬಸ್‌ ಟಿಕೆಟ್‌ ದರವನ್ನೂ ಹೆಚ್ಚಿಸಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ. ಇದರ ವಿರುದ್ಧವೂ ಬಿಜೆಪಿ ಪ್ರತಿಭಟಿಸಲಿದೆ. ಅಲ್ಪಸಂಖ್ಯಾತರು ಏನು ಮಾಡಿದರೂ ನಡೆಯುತ್ತದೆ ಎಂಬ ನಂಬಿಕೆ ಬಂದಿದೆ. ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ ಹಾಗೂ ಮಾಫಿಯಾ ರೌಡಿಗಳಿಗೆ ಭಯ ಕಡಿಮೆಯಾಗಿದೆ. ಗೃಹ ಇಲಾಖೆ ದಿಕ್ಕು ದೆಸೆಯಿಲ್ಲದಂತೆ ನಡೆಯುತ್ತಿದೆ. ಜನರು ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದು ದೂರಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಹಿಂದೆ ಕೇವಲ ಬಿ. ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್‌ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ನರೇಂದ್ರ ಮೋದಿಯವರು ಹಿಂದುಳಿದ ವರ್ಗದ ನಾಯಕರಾಗಿದ್ದು, ಸಚಿವ ಸಂಪುಟದಲ್ಲಿ ಎಲ್ಲ ಜಾತಿ ವರ್ಗಕ್ಕೆ ಸ್ಥಾನಮಾನ ನೀಡಿದ್ದಾರೆ. ಕರ್ನಾಟಕದ ಸಂಸದರಿಗೂ ಅವಕಾಶ ನೀಡಿರುವುದು ಅಭಿನಂದನೀಯ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಹೆಬ್ಬಾಗಿಲಾಗಿದ್ದು, ಇಲ್ಲಿಗೆ ಹೆಚ್ಚು ಅವಕಾಶ ನೀಡಿದ್ದಾರೆ ಎಂದರು.

Exit mobile version