ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 2 ರಿಂದ 4ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಒಳನಾಡಿನ ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ . ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರಿನ ರಸ್ತೆಗಳು ಜಲಾವೃತ
ಮಳೆಯಿಂದಾಗಿ ಮಂಗಳೂರಿನ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿ ದೈನಂದಿನ ಜೀವನಕ್ಕೆ ಅಡ್ಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ 11 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 77 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಪಡೆಗಳು ಸ್ಥಳದಲ್ಲಿ ಮೊಕ್ಕಾಂ: ರಾಜ್ಯ ವಿಪತ್ತು ಪರಿಹಾರ ಪಡೆಗಳ 86 ತಂಡಗಳು ಮತ್ತು 50 ನಾಗರಿಕ ರಕ್ಷಣಾ ತಂಡಗಳು ಜಿಲ್ಲೆಯಲ್ಲೆ ಮೊಕ್ಕಾಂ ಹೂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 9 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಮತ್ಸ್ಯ ಪ್ರಿಯರಿಗೆ ಸಂತಸ: ಉಡುಪಿಯಲ್ಲಿ ಗುರುವಾರ ಸುರಿದ ಭಾರೀ ಮಳೆಯಿಂದ ಕೆಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನೀರು ನಿಂತ ಜಾಗದಲ್ಲಿ ದೊಡ್ಡ ದೊಡ್ಡ ಮೀನುಗಳು ಕಾಣಿಸಿಕೊಂಡಿದ್ದು, ಉಡುಪಿ ಜಿಲ್ಲೆಯ ಕುಂದಾಪುರದ ಮಲ್ಯಾಡಿಯ ಯುವಕರ ತಂಡ ಭರ್ಜರಿ ಮೀನಿನ ಬೇಟೆಯಾಡಿದೆ. ಐವತ್ತಕ್ಕೂ ಹೆಚ್ಚಿನ ಯುವಕರ ತಂಡ ಗದ್ದೆಯಲ್ಲಿ ಮೀನು ಹಿಡಿಯುವ ಬಲೆಯ ಸಹಾಯದಿಂದ ಮೀನು ಹಿಡಿದಿದೆ. ವಿವಿಧ ಬಗೆಯ ನದಿ ಮೀನುಗಳು ಬಲೆಗೆ ಬಿದ್ದಿದ್ದು, ಮತ್ಸ್ಯ ಪ್ರಿಯರು ಸಂತಸಗೊಂಡಿದ್ದಾರೆ.
ಇದನ್ನೂ ಓದಿ | Weather report | ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ನಿರೀಕ್ಷೆ