ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ ಸಮುದಾಯವನ್ನು (Panchamasali Reservation) ೨ಎ ಪ್ರವರ್ಗಕ್ಕೆ ಸೇರಿಸಬೇಕು ಎಂಬ ಒತ್ತಡ ತೀವ್ರವಾಗಿರುವಂತೆಯೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇದಕ್ಕೆ ಸಂಬಂಧಿಸಿದಂತೆ ನೀಡಿರುವ ಮಧ್ಯಂತರ ವರದಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅದನ್ನು ಫೆಬ್ರವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರವು ಸೋಮವಾರ ತಿಳಿಸಿದೆ.
ಬೆಂಗಳೂರಿನ ಡಿ ಜಿ ರಾಘವೇಂದ್ರ ಅವರು ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ ಮತ್ತು ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆಬ್ರವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿತು.
ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಆದೇಶಿಸಬೇಕು ಎಂದು ಕೋರಿರುವ ಅರ್ಜಿ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಈಚೆಗೆ ಆದೇಶಿಸಿತ್ತು. ಇದೀಗ ವರದಿಯಲ್ಲಿ ಏನಿದೆ ಎನ್ನುವ ವಿಚಾರವನ್ನು ಸರ್ಕಾರ ಹೈಕೋರ್ಟ್‌ಗೆ ತಿಳಿಸಲಿದೆ.
ಡಿಸೆಂಬರ್ ೨೯ರಂದೇ ಈ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಿತ್ತು. ಅದರ ಪ್ರಕಾರ, ಪಂಚಮಸಾಲಿಗಳನ್ನು ಪ್ರವರ್ಗ ೨ಎಗೆ ಸೇರಿಸುವುದು ವಿಹಿತವಲ್ಲ, ಬೇಕಿದ್ದರೆ ಬೇರೆ ಪ್ರವರ್ಗ ಸೃಷ್ಟಿಸಬಹುದು ಎಂದು ಅಭಿಪ್ರಾಯಪಟ್ಟಿತ್ತು. ಇದೇ ಕಾರಣಕ್ಕಾಗಿ ಸರಕಾರ ಒಕ್ಕಲಿಗರಿಗಾಗಿ ೨ಸಿ ಮತ್ತು ಪಂಚಮಸಾಲಿಗಳಿಗಾಗಿ ೨ಡಿ ಪ್ರವರ್ಗ ಸೃಷ್ಟಿಸಿ ಮೇಲ್ವರ್ಗದ ಬಡವರಿಗಾಗಿ ಇರುವ ಕೇಂದ್ರ ಸರ್ಕಾರ ಶೇ. ೧೦ರ ಕೋಟಾದಿಂದ ಮೀಸಲಾತಿ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಇದನ್ನು ಪಂಚಮಸಾಲಿ ಮೀಸಲು ಹೋರಾಟಗಾರರು ತಿರಸ್ಕರಿಸಿದ್ದಾರೆ.
ಇದನ್ನೂ ಓದಿ | Panchamasali Reservation : ಮೀಸಲಾತಿ ನೀಡದಿದ್ದರೆ 224 ಕ್ಷೇತ್ರದಲ್ಲೂ ಪ್ರವಾಸ : ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ