Site icon Vistara News

Guest Lecturer: ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ, ವಿಮೆ ಘೋಷಣೆ

Dr MC Sudhakar

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ (Guest Lecturer) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊನೆಗೂ ಅತಿಥಿ ಉಪನ್ಯಾಸಕರ ಮನವಿಗೆ ಸ್ಪಂದಿಸಿರುವ ಸರ್ಕಾರವು ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದೆ.

ಈ ಬಗ್ಗೆ ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಅತಿಥಿ ಉಪನ್ಯಾಸಕರ (guest lecturer) ವೇತನ 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದು, ಇದೇ ವೇಳೆ ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಅತಿಥಿ ಉಪನ್ಯಾಸಕರು ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಕಾಯಂ ಅವರ ಪ್ರಮುಖ ಬೇಡಿಕೆಯಾಗಿದೆ. ಅವರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅವರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ಅಲ್ಪಸಂಖ್ಯಾತರ ಕಾಲೋನಿಗೆ ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ವರ್ಕ್ ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸಲಿದ್ದು, ಹೊಸದಾಗಿ ನೇಮಕಾತಿ ಸಂದರ್ಭದಲ್ಲಿ ಇವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ವೇತನ 5 ಸಾವಿರ ಹೆಚ್ಚಳ

ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ. ಅತಿಥಿ ಉಪನ್ಯಾಸಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಮುಷ್ಕರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈಗಾಗಲೇ ಮುಷ್ಕರದಿಂದ ತೊಂದರೆಯಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ | Kannada Name plate: ಕರವೇ ಅಧ್ಯಕ್ಷ ನಾರಾಯಣ ಗೌಡರನ್ನು ಬಿಡುಗಡೆ ಮಾಡದಿದ್ರೆ ಬೆಂಗಳೂರು ಬಂದ್!

ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ 26,000 ದಿಂದ 32,000 ರೂ. ಇದೆ. ಒಟ್ಟು 10,600 ಅತಿಥಿ ಉಪನ್ಯಾಸಕರಿಗೆ ಈ ವೇತನ ಹೆಚ್ಚಳದ ಪ್ರಯೋಜನ ಸಿಗಲಿದೆ. ಇದರಿಂದ ಸರ್ಕಾರಕ್ಕೆ 55 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version