ಬೆಂಗಳೂರು: ವೇತನ, ಭತ್ಯೆ ಪರಿಷ್ಕರಣೆ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ನಡೆಸುವ ನೌಕರರ ಮುಷ್ಕರಕ್ಕೆ (7th Pay Commission) ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ಘೋಷಿಸಿದೆ.
ಮುಷ್ಕರಕ್ಕೆ ಬೆಂಬಲ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ವಿ.ಪ್ರಭಾಕರ್ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆ ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಫಾರ್ಮಸಿ ಅಧಿಕಾರಿಗಳು ಶಾಂತಿಯುತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಜನಪ್ರತಿನಿಧಿಗಳ ಬಗ್ಗೆ ಲಘು ಸಂವಾದ, ಟೀಕೆಗಳನ್ನು ಮಾಡದೆ, ಗರ್ಭಿಣಿಯರು, ಮಕ್ಕಳು ಹಾಗೂ ಅತಿ ತುರ್ತು ಚಿಕಿತ್ಸೆಯನ್ನು ಗಮನದಲ್ಲಿ ಇರಿಸಿಕೊಂಡು, ಕಾಲಕಾಲಕ್ಕೆ ಸರ್ಕಾರಿ ನೌಕರರ ಸಂಘದಿಂದ ನೀಡುವ ಮಾರ್ಗದರ್ಶನದಂತ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.
ಇದನ್ನೂ ಓದಿ | 7th pay commission : ಸರ್ಕಾರಕ್ಕೆ ಎಚ್ಚರಿಕೆ ನೀಡಲ್ಲ, ಡೆಡ್‌ಲೈನ್ ಕೊಡಲ್ಲ, ಹೋರಾಟದಿಂದ ಹಿಂದೆ ಸರಿಯಲ್ಲ ಎಂದ ಸಿ.ಎಸ್. ಷಡಾಕ್ಷರಿ
ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಎ.ಎನ್.ದೇಸಾಯಿ ಪ್ರತಿಕ್ರಿಯಿಸಿ, 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಶೀಘ್ರವಾಗಿ ಪಡೆಯಬೇಕಾಗಿದೆ. ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘ ಮುಷ್ಕರ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ಅಪಘಾತ ಚಿಕಿತ್ಸೆ, ತರ್ತು ಸೇವೆ, ಮರಣೋತ್ತರ ಪರೀಕ್ಷೆಗಳನ್ನು ಮುಂದುವರಿಸುವ ಮೂಲಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.