Site icon Vistara News

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

BS Yediyurappa

POCSO Case: Arrest Warrant Issued Against BS Yediyurappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೊ ಪ್ರಕರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿದುಬಂದಿದೆ. ನ್ಯಾಯಾಧೀಶ ಎನ್‌.ಎಂ.ರಮೇಶ್‌ ಅವರು ಯಡಿಯೂರಪ್ಪ ಅವರ ವಿರುದ್ಧ ಅರೆಸ್ಟ್ ವಾರಂಟ್‌ ಹೊರಡಿಸಲು ಆದೇಶಿಸಿದ್ದಾರೆ. ಮತ್ತೊಂದೆಡೆ, ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿಯನ್ನು ಕೋಣೆಯೊಳಗೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಬಾಲಕಿಯ ತಾಯಿಯು ಮಾರ್ಚ್‌ 17ರಂದು ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಈಗಾಗಲೇ, ಬಂಧನದಿಂದ ರಕ್ಷಣೆ ಹಾಗೂ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬುದಾಗಿ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಗೂ ಹಾಜರಾಗಿದ್ದರು.

ದೆಹಲಿಯಲ್ಲಿದ್ದಾರೆ ಮಾಜಿ ಸಿಎಂ

ಬಿ.ಎಸ್‌.ಯಡಿಯೂರಪ್ಪ ಅವರು ಸದ್ಯ ದೆಹಲಿಯಲ್ಲಿದ್ದು, ಗುರುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಮೂರು ದಿನಗಳ ಹಿಂದೆಯೇ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಪೋಕ್ಸೊ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರ (ಜೂನ್‌ 14) ವಿಚಾರಣೆಗೆ ಬರುವ ಸಾಧ್ಯತೆ ಇದೆ. ಒಂದು ಕಡೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿದೆ. ಮತ್ತೊಂದು ಕಡೆ, ಶುಕ್ರವಾರ ನ್ಯಾಯಾಲಯದ ತೀರ್ಪು ಯಡಿಯೂರಪ್ಪ ಅವರಿಗೆ ಮಹತ್ವದ್ದಾಗಿದೆ. ಇದು ಯಡಿಯೂರಪ್ಪ ಅವರನ್ನು ತುಸು ಚಿಂತೆಯಲ್ಲಿ ಮುಳುಗಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Exit mobile version