Site icon Vistara News

Police Insurance : ಹುತಾತ್ಮ ಪೊಲೀಸ್‌ ಸಿಬ್ಬಂದಿ ಗುಂಪು ವಿಮಾ ಮೊತ್ತ ಇನ್ನು 50 ಲಕ್ಷ ರೂ.: ಸಿಎಂ ಸಿದ್ದರಾಮಯ್ಯ

martyred police personnel tribute from CM Siddaramaiah

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ (Martyred Police Personnel) ಗುಂಪು ವಿಮಾ (Police Insurance) ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುತ್ತದೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಶನಿವಾರ ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: Basavaraj Bommai : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಹೊಸ ವಾಹನಗಳ ಖರೀದಿಗೆ 100 ಕೋಟಿ ರೂ.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧ

ಕರ್ನಾಟಕದ ಪೊಲೀಸ್ ವ್ಯವಸ್ಥೆ ರಾಜ್ಯದ, ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತಾ ಬಂದಿದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೆಯೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿಯು ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ‌ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು‌ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸೈಬರ್‌ ಅಪರಾಧಕ್ಕೆ ಬೀಳಲಿ ಕಡಿವಾಣ

ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು. ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಗೃಹ ಮಂತ್ರಿ ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು.

ಇದನ್ನೂ ಓದಿ: Karnataka Weather : ಸಂಡೆ ಆದ್ಮೇಲೆ ಮಂಡೆ ಬರ್ತದೆ; ಮಳೆಯೇ ಆಗದೆ ಮಂಡೆ ಬಿಸಿ ಆಗ್ತಿದೆ!

ಹುತಾತ್ಮ ಪೊಲೀಸ್‌ ಸಿಬ್ಬಂದಿ ಕುಟುಂಬಕ್ಕೆ ಸರ್ಕಾರದ ಸಹಕಾರ: ಸಿದ್ದರಾಮಯ್ಯ

ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲು ತೀರ್ಮಾನಿಸಿ ಇಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಈ ವರ್ಷದ ಆಗಸ್ಟ್‌ವರೆಗೆ 16 ಜನ ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನೂ ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Exit mobile version