Site icon Vistara News

Actress Leelavathi: ನಟಿ ಲೀಲಾವತಿ ನಿಧನಕ್ಕೆ ಮೋದಿ ಸೇರಿ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರ ಸಂತಾಪ

actress Leelavathi

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Actress Leelavathi) ಅವರ ನಿಧನಕ್ಕೆ ರಾಜಕೀಯ ಪ್ರಧಾನಿ ನರೇಂದ್ರ ಮೋದಿ ಸೇರಿ ಪ್ರಮುಖ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರರನ್ನು ರಂಜಿಸಿದ್ದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಪ್ರಮುಖರು ಕಂಬನಿ ಮಿಡಿದಿದ್ದಾರೆ.

ಅನಾರೋಗ್ಯದಿಂದ ನಟಿ ಲೀಲಾವತಿ ಅವರು ನಿಧನರಾಗಿದ್ದು, ನೆಲಮಂಗಲ ಬಳಿಯ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ನೆಲಮಂಗಲದ ಜೂನಿಯರ್ ಕಾಲೇಜಿನ ಅಂಬೇಡ್ಕರ್ ಮೈದಾನದಲ್ಲಿ ಶನಿವಾರ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹೆಸರಾಂತ ನಟಿ ಲೀಲಾವತಿ ನಿಧನದ ಸುದ್ದಿ ಕೇಳಿ ದುಃಖವಾಯಿತು: ಪ್ರಧಾನಿ ಮೋದಿ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದ ಸಿಎಂ

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ.

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಹಿರಿಯ ಕಲಾವಿದೆ ನಿಧನದಿಂದ ಅತೀವ ದುಃಖವಾಗಿದೆ: ಬಿಎಸ್‌ವೈ

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿ ವರ್ಗದವರಲ್ಲಿ ಸಂತಾಪಗಳನ್ನು ಸಲ್ಲಿಸುತ್ತೇನೆ. ಓಂ ಶಾಂತಿ ಎಂದು ಹೇಳಿದ್ದಾರೆ.

ಲೀಲಾವತಿ ಆತ್ಮಕ್ಕೆ ಚಿರಶಾಂತಿ ಸಿಗಲಿ: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು.

ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಿದರು: ಡಿಕೆಶಿ

ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ, ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್‌ ರಾಜ್‌ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ ಎಂದು ತಿಳಿಸಿದ್ದಾರೆ.

ಕನ್ನಡ ಸಿನಿಲೋಕಕ್ಕೆ ಅಪಾರ ನಷ್ಟವಾಗಿದೆ: ಬಿ.ವೈ.ವಿಜಯೇಂದ್ರ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿ, ಕನ್ನಡನಾಡು ಎಂದೂ ಮರೆಯಲಾಗದ ದಕ್ಷಿಣ ಭಾರತ ಚಿತ್ರರಂಗದ ಮಹಾನ್ ನಟಿ ಲೀಲಾವತಿ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅಪಾರ ದುಃಖವಾಯಿತು. ತಮ್ಮ ಮನೋಜ್ಞ ಅಭಿನಯದ ಮೂಲಕ ಸಂತ ತುಕಾರಾಂ, ಭಕ್ತ ಕುಂಬಾರ, ಸಿಪಾಯಿ ರಾಮು, ವೀರ ಕೇಸರಿ ಸೇರಿದಂತೆ 600 ಕ್ಕೂ ಹೆಚ್ಚು ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಲೀಲಾವತಿ ಅವರು ನೀಡಿದ ಕೊಡುಗೆ ಅಪಾರ.

ಕಲಾ ಸೇವೆಯ ಜತೆ ಜತೆಗೆ ಅವರಿಗಿದ್ದ ಸಾಮಾಜಿಕ ಕಳಕಳಿ, ಬಡವರ ಪರವಾಗಿದ್ದ ಧೀಮಂತಿಕೆಯಿಂದ ಅವರು ಭೌತಿಕವಾಗಿ ಇಲ್ಲದಿದ್ದರೂ, ಎಂದೆಂದಿಗೂ ಕನ್ನಡ ನಾಡಿನ ಸಿನಿ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ. ಅವರ ಸುಪುತ್ರ ವಿನೋದ್ ರಾಜ್ ಹಾಗೂ ಅಭಿಮಾನಿ ವರ್ಗಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ. ಲೀಲಾವತಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು ಪ್ರಾರ್ಥಿಸುವೆ.
ಓಂಶಾಂತಿ ಎಂದು ಹೇಳಿದ್ದಾರೆ.

ಮಾತೃ ಹೃದಯಿ ಕಲಾವಿದೆ: ಎಂ.ಬಿ. ಪಾಟೀಲ್‌

ಸಚಿವ ಎಂ.ಬಿ. ಪಾಟೀಲ್‌ ಮಾತನಾಡಿ, ತಮ್ಮ ಮನೋಜ್ಞ ಅಭಿನಯದ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾಗಿರುವ ಹಿರಿಯ ಕಲಾವಿದೆ ಲೀಲಾವತಿಯವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಕನ್ನಡ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಮಾತೃ ಹೃದಯಿಯಾಗಿ ಅನೇಕ ಬಡ ಕಲಾವಿದರ ನೆರಳಾಗಿದ್ದರು. ನಟನೆ ಹೊರತಾಗಿ ಸಾಮಾಜಿಕ ಸೇವಾ ಕಾರ್ಯಗಳ ಮೂಲಕವೂ ಅವರು ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅಭಿಮಾನಿಗಳಿಗೆ ಮತ್ತು ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಲೀಲಾವತಿ ಸೇವೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಹಲವು ದಶಕಗಳ ಕಾಲ ಕನ್ನಡ ಚಿತ್ರರಂಗಕ್ಕೆ ಅವರ ಸೇವೆ ಅಪಾರ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಲೀಲಾವತಿಯವರು ರೈತರ ಬಗ್ಗೆ ಅಪಾರ ಕಾಳಜಿಯನ್ನಿಟ್ಟುಕೊಂಡು, ಸ್ವಂತ ಖರ್ಚಿನಲ್ಲಿ ಪಶುಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಿಸಿರುವುದು ಗಮನಾರ್ಹ. ಈ ಸಮಯದಲ್ಲಿ ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Actress Leelavathi : ಹಿರಿಯ ನಟಿ ಲೀಲಾವತಿ ವಿಧಿವಶ; ಹೋರಾಟದಲ್ಲೇ ಬೆಳೆದ ಲೀಲಮ್ಮ ಇನ್ನಿಲ್ಲ

ಇಡೀ ರಾಜ್ಯಕ್ಕೆ ದುಃಖಕರ ಸಂಗತಿ: ನಟ ದರ್ಶನ್

ನಟ ದರ್ಶನ್‌ ಪ್ರತಿಕ್ರಿಯಿಸಿ, ನಮ್ಮ ಕರುನಾಡಿನ ಹೆಸರಾಂತ ಕಲಾವಿದೆ ಲೀಲಾವತಿ ಅಮ್ಮನವರು ಇಂದು ಸಾವನ್ನಪ್ಪಿರುವುದು ಇಡೀ ರಾಜ್ಯಕ್ಕೆ ಒಂದು ದುಃಖಕರ ಸಂಗತಿ. ಈ ಮಹಾನ್ ಚೇತನಕ್ಕೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ, ವಿನೋದ್ ರಾಜ್ ರವರ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ಸಿಗಲಿ.
ಓಂ ಶಾಂತಿ

ಇದನ್ನೂ ಓದಿ | Actress Leelavathi : ಲೀಲಾವತಿ ಪತಿ ಯಾರು? ಪುತ್ರನ ಹೆಸರು ವಿನೋದ್‌ ರಾಜ್‌ ಆಗಿದ್ದು ಹೇಗೆ?

ಹಾಸ್ಯ ನಟ ಸಾಧು ಕೋಕಿಲ ಸಂತಾಪ

ನಟ ಗಣೇಶ್‌ ಸಂತಾಪ

ನಟಿ, ಸಂಸದೆ ಸುಮಲತಾ ಅಂಬರೀಶ್‌ ಸಂತಾಪ

Exit mobile version