Site icon Vistara News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಿ: ಅಧ್ಯಕ್ಷರಿಗೆ ಸಹ ಕಾರ್ಯದರ್ಶಿ ಒತ್ತಾಯ

ಶಿಕ್ಷಕರ ಸಂಘ

#image_title

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಲವಾರು ಗೊಂದಲಗಳ ಮಧ್ಯೆ ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಅನಿರ್ದಿಷ್ಟಾವಧಿ ಹೋರಾಟ ಘೋಷಣೆ ಮಾಡಿದೆ. ಈ ಹೋರಾಟಕ್ಕೆ ಬೆಂಬಲ ಸೂಚಿಸುವ ಕುರಿತು ಸೂಕ್ತ ಅಭಿಪ್ರಾಯಗಳನ್ನು ಸಂಗ್ರಹಿಸಿ, ನಿರ್ಣಯಗಳನ್ನು ತೆಗೆದುಕೊಳ್ಳಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಆದಷ್ಟು ಬೇಗ ಏರ್ಪಡಿಸಬೇಕು ಎಂದು ಸಂಘದ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳಿಗೆ ಸಹ ಕಾರ್ಯದರ್ಶಿ ಎಚ್.ಎಸ್. ಚೇತನ್ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒಂದು ಸ್ವತಂತ್ರ ಸಂಘಟನೆಯಾಗಿದ್ದು, ಸೈದ್ಧಾಂತಿಕ ಬದ್ಧತೆ ಹಾಗೂ ತನ್ನದೇ ಆದ ತತ್ವಗಳ ಮೇಲೆ ಕೆಲಸ ಮಾಡುತ್ತಿದೆ. ಹೋರಾಟಗಳಿಗೆ ಬೆಂಬಲ ಸೂಚಿಸುವ ಸಂದರ್ಭದಲ್ಲಿ ನಮ್ಮ ಸಂಘಟನೆಯಲ್ಲಿ ಕಳೆದ 52 ವರ್ಷಗಳಿಂದ ಒಂದು ಸಂಪ್ರದಾಯವಿದೆ. ಸಂಘ ಈ ಹಿಂದೆ ಬೆಂಬಲಿಸುವ ಮತ್ತು ಬೆಂಬಲಿಸಿದ ಎಲ್ಲಾ ಹೋರಾಟಗಳಿಗೆ ರಾಜ್ಯದ ಕಾರ್ಯಕಾರಿ ಸಮಿತಿ ಸಭೆ ಕರೆದು ಆ ಸಭೆಯಲ್ಲಿ ಸಾಧಕ ಬಾಧಕಗಳನ್ನು ಚರ್ಚೆ ಮಾಡಿ ಸಭೆಯಲ್ಲಿ 35 ಜಿಲ್ಲೆಗಳ ಅಧ್ಯಕ್ಷರ ಅಭಿಪ್ರಾಯ ಕ್ರೋಡೀಕರಿಸಿ ತದನಂತರ ಹೋರಾಟಕ್ಕೆ ಬೆಂಬಲ ಸೂಚಿಸುವ ಕುರಿತು ಸಮಗ್ರವಾಗಿ ಚರ್ಚಿಸಿ ನಮ್ಮದೇ ಆದ ನಿರ್ಧಾರ ಪ್ರಕಟಗೊಳಿಸುವ ಸಂಪ್ರದಾಯವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಈ ಸಂಪ್ರದಾಯಕ್ಕೆ ಅನುಗುಣವಾಗಿ ಈಗಾಗಲೇ ರಾಜ್ಯ ಕಾರ್ಯಕಾರಿ ಸಮಿತಿಯ ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ ಬಹಳಷ್ಟು ಜನ ಅಧ್ಯಕ್ಷರು, ಕಾರ್ಯದರ್ಶಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲು ಆಗ್ರಹಿಸುತ್ತಿರುವುದರಿಂದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಕರೆಯಲು ಸಂಘದ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳನ್ನು ಒತ್ತಾಯಿಸಿರುವುದಾಗಿ ಸಂಘದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು, ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರಿಗೆ ಎಚ್.ಎಸ್. ಚೇತನ್ ಮಾಹಿತಿ ನೀಡಿದ್ದಾರೆ.

ಮಾರ್ಚ್‌ 1 ರಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಹೋರಾಟ

ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆಗಾಗಿ ರಚಿಸಲ್ಪಟ್ಟಿರುವ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿಗೆ ತರುವ ಕುರಿತು ಬದ್ಧತೆ ಪ್ರಕಟಿಸಬೇಕು ಮತ್ತು ಹಳೆ ಪಿಂಚಣಿ ಯೋಜನೆ (ಓಪಿಎಸ್‌) ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘವು ತೀರ್ಮಾನಿಸಿದೆ. ಸರ್ಕಾರ ಮಾರ್ಚ್‌ 1 ರ ಒಳಗೆ ಅಂತಿಮ ತೀರ್ಮಾನ ಪ್ರಕಟಿಸದೇ ಇದ್ದಲ್ಲಿ ಅನಿರ್ಧಿಷ್ಟಾವಧಿಯ ಈ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌. ಷಡಾಕ್ಷರಿ ತಿಳಿಸಿದ್ದಾರೆ.

Exit mobile version