ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಭಾರತಮ್ಮ ಹಾಗೂ ಚಿತ್ರಕಲೆ ಶಿಕ್ಷಕ ಮುನಿಯಪ್ಪ ಅವರನ್ನು ಬಂಧಿತರು. ಪ್ರಕರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದ್ಯ ಇಬ್ಬರನ್ನು ಮಾಸ್ತಿ ಠಾಣೆ ಬಂಧಿಸಲಾಗಿದೆ. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಹಾಗೂ ಸಹ ಶಿಕ್ಷಕ ಅಭಿಷೇಕ್ ಮೇಲೆ ಕೂಡ ಎಫ್‌ಐಆರ್ ದಾಖಲಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ.
ಪ್ರಕರಣದ ಬಗ್ಗೆ ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದರು. ನಂತರ ಮೂವರನ್ನು ಅಮಾನತು ಮಾಡಲಾಗಿತ್ತು. ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ | Theft Case : ಸಿಟಿ ಮಂದಿ ನಿದ್ದೆಗೆಡಿಸಿದ ಅರೆಬೆತ್ತಲೆ ಮುಸುಕುಧಾರಿ ಕಳ್ಳರು!
ಏನಿದು ಪ್ರಕರಣ?
ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆಯ ನೆಪದಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಪೋಷಕರು ಬೇಸರ ವ್ಯಕ್ತಪಡಿಸಿ ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದರು. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿತ್ತು. ಈ ಕುರಿತ ವಿಡಿಯೊ ಹಾಗೂ ಫೊಟೊಗಳು ಎಲ್ಲೆಡೆ ಹರಿದಾಡಿದ್ದರಿಂದ ವಿರೋಧ ವ್ಯಕ್ತವಾಗಿತ್ತು. ನಂತರ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ, ಶಿಕ್ಷಕರ ವಿರುದ್ಧ ಪೋಷಕರು ದೂರು ದಾಖಲಿಸಿದ್ದರು.
ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಯು ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದರು. ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಇದೇ ರೀತಿಯಲ್ಲಿ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್ ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪವಿದೆ.
ಇದನ್ನೂ ಓದಿ | School Teacher : ಸ್ವಚ್ಛತೆ ನೆಪದಲ್ಲಿ ಮಕ್ಕಳನ್ನೇ ಮಲದ ಗುಂಡಿಗೆ ಇಳಿಸಿದ ಶಿಕ್ಷಕರು!
ಇದಲ್ಲದೆ, ಮಕ್ಕಳಿಗೆ ಹೊಡೆಯುವುದು, ಮಕ್ಕಳನ್ನು ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಕೂರಿಸಿ ಹಿಂಸೆ ಕೊಡಲಾಗುತ್ತಿದೆ ಎಂದು ದೂರಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಜನ ಮಕ್ಕಳಿದ್ದು, ಅವರಿಗೆ ಶಿಕ್ಷೆ ನೀಡುವುದನ್ನು ತಪ್ಪಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.