ಬೆಂಗಳೂರು: ಸೇನೆಯಲ್ಲಿ ಉದ್ಯೋಗಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ನೂತನ ಯೋಜನೆಯಾದ ʻಅಗ್ನಿಪಥ್ʼ (Agnipath) ವಿರುದ್ಧ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಯುವಕರು ತೀವ್ರ ಪ್ರತಿಭಟನೆ ಆರಂಭಿಸಿದ್ದಾರೆ. ಇದನ್ನು ನಿಭಾಯಿಸಲು ಪೊಲೀಸರು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ. ಬೆಳಗಾವಿ, ವಿಜಯಪುರ ಹಾಗೂ ಧಾರವಾಡ ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ದಾವಣಗೆರೆ: ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆದಿದೆ. ಎಐಡಿಎಸ್ಓ ಕಾರ್ಯಕರ್ತರು ಸೇರಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಅಗ್ನಿಪಥ್ ಯೋಜನೆ ಕೈಬಿಟ್ಟು ಮೊದಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯ ಮಾಡಿದ್ದಾರೆ.
ಶಿವಮೊಗ್ಗ: ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಆರಂಭಗೊಂಡಿದೆ. ನಗರದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲ್ವೆ ನಿಲ್ದಾಣದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: Agnipath | ಬೆಳಗಾವಿ ಬಂದ್ ಹಿನ್ನೆಲೆ, ಪೊಲೀಸರಿಂದ ಬಿಗಿ ಬಂದೋಬಸ್ತ್; ಬಂದ್‌ಗೆ ಕರೆ ಕೊಟ್ಟಿದ್ಯಾರು?
ಧಾರವಾಡ: ಧಾರವಾಡದಲ್ಲಿ ಪೊಲೀಸರು ನಗರದಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ಇತ್ತೀಚೆಗಷ್ಟೇ ಧಾರವಾಡದಲ್ಲಿ ಪ್ರತಿಭಟನೆ ನಡೆದಿದ್ದು, ಇಂದು ಎಲ್ಲಿಯೂ ಯುವಕರು ಗುಂಪು ಸೇರದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹಳೇ ಎಸ್‌ಪಿ ವೃತ್ತ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಕೆಎಸ್ಆರ್‌ಪಿ ಸೇರಿದಂತೆ ಸೇನಾ ತುಕಡಿಯನ್ನು ನಿಯೋಜಿಸಿ ಬಿಗಿ ಭದ್ರತೆ ಮಾಡಲಾಗಿದೆ.
ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲೂ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಅಗ್ನಿಪಥ್ ಯೋಜನೆಯ ಕುರಿತು ನಗರದಲ್ಲಿ ಎಲ್ಲಿಯೂ ಗಲಭೆ, ದೊಂಬಿ, ಗಲಾಟೆಗಳು ನಡೆಯದಂತೆ ಬಿಗಿಕ್ರಮ ಕೈಗೊಂಡಿದ್ದಾರೆ.
ಕೊಪ್ಪಳ: ಅಗ್ನಿಪಥ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಹಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಿ ಸಾರ್ವಜನಿಕ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಇದನ್ನೂ ಓದಿ: Agnipath | ಅಗ್ನಿಪಥ್ ಯೋಜನೆ ವಿರೋಧಿಸಿ ಇಂದು ಭಾರತ ಬಂದ್ ಕರೆ, ಹಲವು ರಾಜ್ಯಗಳಲ್ಲಿ ಹೈ ಅಲರ್ಟ್