ಬೆಂಗಳೂರು: ಸೋನಿಯಾ ಗಾಂಧಿ (Sonia Gandhi) ವಿರುದ್ಧ ನಡೆಯುತ್ತಿರುವ ಇಡಿ (ಜಾರಿ ನಿರ್ದೇಶನಾಲಯ) ವಿಚಾರಣೆ ಹಿನ್ನೆಲೆಯಲ್ಲಿ ಕೈ ನಾಯಕರು ಕರ್ನಾಟಕದಲ್ಲಿ ಶುಕ್ರವಾರವೂ (ಜುಲೈ 22) ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆಗೆ ಒಳಪಡಿಸಿದ್ದು, ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಕಾರ್ಯಕರ್ತರಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದರು. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ (ಜುಲೈ 21) ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸಲಾಗಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಆರಂಭಗೊಂಡು ರಾಜಭವನದವರೆಗೆ ಬೃಹತ್ ಮೆರವಣಿಗೆಯನ್ನು ನಡೆಸಲಾಗಿತ್ತು. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದರು.
ಈ ಪ್ರತಿಭಟನೆಯು ಶುಕ್ರವಾರ ಕೂಡ ಮುಂದುವರಿಯಲಿದೆ ಎಂದು ಹೇಳಲಾಗಿದೆ. ರಾಜ್ಯದ ವಿವಿಧ ಜಿಲ್ಲಾ ಕೆಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ದಾವಣಗೆರೆಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈಗಾಗಲೇ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿದೆ.
ಇದನ್ನೂ ಓದಿ: Traffic in Bangalore | ಸೋನಿಯಾಗೆ ಇಡಿ ವಿಚಾರಣೆ; ಬೆಂಗಳೂರಲ್ಲಿ ಕೈ ಪ್ರತಿಭಟನೆ, ಇಲ್ಲೆಲ್ಲ ಟ್ರಾಫಿಕ್ ಜಾಮ್