ಮಂಗಳೂರು: ಕೆಲದಿನಗಳ ಹಿಂದಷ್ಟೆ ಉಡುಪಿಯಿಂದ ಆರಂಭವಾಗಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗಿದ್ದ ಹಿಜಾಬ್-ಕೇಸರಿ ಶಾಲು ವಿಚಾರ ಮತ್ತೆ ಮರುಕಳಿಸಿದೆ. ಹಿಜಾಬ್ ಧರಿಸಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಂಪನಕಟ್ಟೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಕಾಲೇಜಿನಲ್ಲಿ ಹೈಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ. ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್ ಧರಸಿಯೇ ಬರುತ್ತಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲೂ ಹಿಜಾಬ್ ನೆರಳು: ಪಿಯುಗೆ ಸಮವಸ್ತ್ರ ಕಡ್ಡಾಯ
ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ನಮಗೂ ಕೇಸರಿ ಶಾಲು ಧರಿಸಲು ಅನುಮತಿ ನೀಡಬೇಕು ಎಂದು ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಹಿಜಾಬ್‌ಗೆ ಆಡಳಿತ ಮಂಡಳಿ ಬ್ರೇಕ್
ಸಮವಸ್ತ್ರ ಹೊರತುಪಡಿಸಿ ಯಾವುದೇ ಉಡುಪನ್ನು ಧರಿಸುವಂತಿಲ್ಲ, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾಲೇಜು ಆಡಳಿತ ಮಂಡಳಿ ಸೂಚಿಸಿದೆ. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ.
ಸಿಇಟಿಗೂ ನಿಷೇಧ
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿಯಲ್ಲೂ ಹಿಜಾಬ್‌ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಿಯಮಗಳೇ ಸಿಇಟಿಗೆ ಅನ್ವಯವಾಗುತ್ತವೆ. ಜೂನ್ 16, 17 ಮತ್ತು 18ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | ದೇಶ ಎತ್ತ ಸಾಗುತ್ತಿದೆ?: ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ ಹಿಜಾಬ್ ಯುವತಿ ಆಲಿಯಾ