Site icon Vistara News

PSI Exam: ಜ. 23ರಂದು ಪಿಎಸ್ಐ ಮರುಪರೀಕ್ಷೆ; ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ

PSI Examination Centre

ಬೆಂಗಳೂರು: ಜ.23ರಂದು ಪಿಎಸ್ಐ ಮರು ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ಬಾರಿ ಪಿಎಸ್‌ಐ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದ್ದರಿಂದ ಈ ಬಾರಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ.

ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲುಬಿಗಿ ಭದ್ರತೆ ಏರ್ಪಡಿಸಲು ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ. ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜಿಸಲಾಗಿದೆ.

ಒಟ್ಟಾರೆಯಾಗಿ 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. 54 ಸಾವಿರ ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆಯುತ್ತಿದ್ದು. ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಬೇರಾವ ಭಾಗದಲ್ಲೂ ಈ ಪರೀಕ್ಷಾ ಕೇಂದ್ರಗಳು ಇಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2021ರ ಅಕ್ಟೋಬರ್‌ ಮೂರರಂದು ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಒಟ್ಟು 545 ಹುದ್ದೆಗಳಿಗಾಗಿ ಲಕ್ಷಾಂತರ ಜನ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಬಳಿಕ 52 ಮಂದಿ ಅಭ್ಯರ್ಥಿಗಳು ಇದರಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿತ್ತು. ಅವರಿಗೆ ಇನ್ನು ಯಾವುದೇ ಪೊಲೀಸ್‌ ಪರೀಕ್ಷೆಗೆ ಹಾಜರಾಗದಂತೆ ಶಾಶ್ವತವಾಗಿ ನಿರ್ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಹಲವರ ಬಂಧನವಾಗಿದೆ.

ಇದನ್ನೂ ಓದಿ | Job Alert: ಬ್ಯಾಂಕ್‌ ಆಫ್‌ ಬರೋಡಾದ 250 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಈ ನಡುವೆ ಅಕ್ರಮ ಎಸಗಿದವರನ್ನು ಹೊರತುಪಡಿಸಿ ಉಳಿದವರ ಆಯ್ಕೆ ಪಟ್ಟಿಯನ್ನು ಪ್ರಕಟಿಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದರು. ಆದರೆ, ಸರ್ಕಾರ ಮರುಪರೀಕ್ಷೆಗೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್‌ ಮೊರೆ ಹೊಕ್ಕಿದ್ದರು. ಆದರೆ, ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ 2023ರ ನವೆಂಬರ್‌ನಲ್ಲಿ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿತ್ತು. ಹೀಗಾಗಿ ಪಿಎಸ್‌ಐ ಮರುಪರೀಕ್ಷೆ ನಡೆಸಲಾಗುತ್ತಿದೆ.

Exit mobile version