ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ತಾತ್ಕಾಲಿಕ ತಡೆಯೊಡ್ಡಿರುವ ಹೈಕೋರ್ಟ್ ಈ ಸಂಬಂಧ ಅಫಿಡವಿಟ್ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರೆಟರಿ ಅವರಿಗೆ ಸೂಚನೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಬುಧವಾರ ಸಂಜೆ ನಾಲ್ಕು ಗಂಟೆಗೆ ಮುಂದೂಡಲಾಗಿದೆ.
ಹೈಕೋರ್ಟ್‌ನ ನ್ಯಾ. ಪ್ರದೀಪ್ ಸಿಂಗ್ ಹೆರೂರ್ ಅವರ ನೇತೃತ್ವದ ಏಕಸದಸ್ಯ ಪೀಠವು ಕಳೆದ ಶುಕ್ರವಾರ ನಡೆಸಿದ ಮಹತ್ವದ ವಿಚಾರಣೆಯ ವೇಳೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿತ್ತು. ಈ ನಡುವೆ ಹೆರೂರ್ ನೇತೃತ್ವದ ಏಕದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿತ್ತು. ಅದರ ವಿಚಾರಣೆ ಶನಿವಾರ ನಡೆದು ಮಾ. 13ರಂದು ಆರಂಭವಾಗಬೇಕಾಗಿದ್ದ ಪರೀಕ್ಷೆಯನ್ನು ಆರಂಭಿಸದಂತೆ ಸೂಚಿಸಿ ಮಾರ್ಚ್ 14ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.
ಮಂಗಳವಾರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನರೇಂದರ್ ಹಾಗು ನ್ಯಾ. ಅಶೋಕ್ ಕಿಣಗಿ ಅವರ ವಿಭಾಗೀಯ ಪೀಠವು ಶಿಕ್ಷಣ ಮಂಡಳಿಯು ಪರೀಕ್ಷೆ ಸಂಬಂಧ ತೆಗೆದುಕೊಂಡಿದ್ದ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.
ಇಲಾಖೆ ಪ್ರಿನ್ಸಿಪಾಲ್ ಸೆಕ್ರೆಟರಿಯಿಂದ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ ನಾಳೆ ಸಂಜೆ 4 ಗಂಟೆಗೆ ವಿಚಾರಣೆ ಮುಂದೂಡಿದೆ.
ಏನಿದು ವಿವಾದ, ಯಾಕಿಷ್ಟು ಹಗ್ಗ ಜಗ್ಗಾಟ?
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮೇಲ್ಮನವಿ ಸಲ್ಲಿಸಿದ್ದರು. 2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 2022ರ ಡಿಸೆಂಬರ್ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು.
ಅದನ್ನು ಫೆಬ್ರವರಿ 23ರಂದು ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಇದರಿಂದ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಸಂಘದ ಆಕ್ಷೇಪಣೆಯಾಗಿತ್ತು.
ಮೇಲ್ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳ ಪರೀಕ್ಷೆಗಳು ಮಾರ್ಚ್ 13ರಂದು ಆರಂಭವಾಗಲಿರುವುದರಿಂದ ತುರ್ತಾಗಿ ಅರ್ಜಿ ಇತ್ಯರ್ಥ ಪಡಿಸಿ ಎಂದು ಸೂಚಿಸಿತ್ತು. ಅದರಂತೆ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಮಂಗಳವಾರ ಮತ್ತೊಂದು ಸುತ್ತಿನ ವಿಚಾರಣೆ ನಡೆದು ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸಲು ಸೂಚಿಸಲಾಯಿತು.
ಇದನ್ನೂ ಓದಿ : Public Exam : ಮಾ. 13ರಂದು ಆರಂಭವಾಗಬೇಕಿದ್ದ 5, 8ನೇ ತರಗತಿ ಪರೀಕ್ಷೆ ಮುಂದೂಡಿಕೆ, ಹೈಕೋರ್ಟ್ ಆದೇಶದಂತೆ ಸರ್ಕಾರ ಕ್ರಮ