ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.
ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.
ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಬ್ಯೂಟಿ ಅಂಡ್ ವೆಲ್‌ನೆಸ್ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೆಕ್ಷನ್ 144 ಜಾರಿ
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್ ಮಾರ್ಕ್ಸ್ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?