ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ (Shivamogga) ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೂನ್ 27ರಿಂದ ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಗಳಲ್ಲಿ ಭಾರಿ ಗಾತ್ರದ ವಾಹನಗಳ (Heavy Vehicles) ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗಗಳನ್ನೂ ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಮಲೆನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟದ ಮಧ್ಯೆಯೂ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ. ಇದರ ಮಧ್ಯೆ, ಭಾರಿ ಗಾತ್ರದ ವಾಹನಗಳ ಓಡಾಟವೂ ಮುಂದುವರಿದರೆ ಭೂಕುಸಿತ ಉಂಟಾಗುವ ಸಾಧ್ಯತೆಗಳು ಜಾಸ್ತಿ ಇರುತ್ತವೆ. ಹಾಗಾಗಿ, ಸೆಪ್ಟೆಂಬರ್ 15ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾಗಿ, ತೀರ್ಥಹಳ್ಳಿ- ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ತೀರ್ಥಹಳ್ಳಿ–ಮಾಸ್ತಿಕಟ್ಟೆ– ಸಿದ್ದಾಪುರ– ಕುಂದಾಪುರ- ಉಡುಪಿ ಮಾರ್ಗವಾಗಿ ಭಾರಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.
ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು