ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದಲ್ಲಿ (Rama Mandir) ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ (Prana Prathishte) ಭಾಗವಹಿಸದೇ ರಾಜ್ಯ ಕಾಂಗ್ರೆಸ್ ನಾಯಕರು ವಿವಾದ ಮೈಮೇಲೆ ಎಳೆದುಕೊಂಡಿದ್ದರೂ ದೇಶದ ಹೊಸ ಯಾತ್ರಾ ಕ್ಷೇತ್ರವಾಗಿ ರೂಪಗೊಂಡಿರುವ ಅಯೋಧ್ಯೆಯಲ್ಲಿ ವಸತಿ ಗೃಹ (Yatri Nivas in Ayodhya) ನಿರ್ಮಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ.
ಈಗಾಗಲೇ ಅಯೋಧ್ಯೆಯಲ್ಲಿ ಕರ್ನಾಟಕದ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿ ಗೃಹ ನಿರ್ಮಿಸಲು ನಿವೇಶನ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ನಿವೇಶನ ಹಂಚಿಕೆ ಮಾಡಿದರೆ ನೂರು ಕೋಟಿ ರೂ.ಗಳ ವೆಚ್ಚದಲ್ಲಿ ಭವ್ಯವಾದ ವಸತಿ ಗೃಹ ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ.
ಬರುವ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ ಎಂದು ಮುಜರಾಯಿ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. 2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಿದ್ಧಪಡಿಸಿರುವ ಹೊಸ ಯೋಜನೆಗಳ ಪಟ್ಟಿಯಲ್ಲಿ ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣ ಕೂಡ ಸೇರಿದೆ. ಅಲ್ಲದೆ ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರಕ್ಕೂ ಕೂಡ ನೂರು ಕೋಟಿ ರೂ. ಘೋಷಿಸಬೇಕೆಂದು ಇಲಾಖೆಯು ಕೋರಿದೆ.
ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಿಸಲಾಗುತ್ತದೆ. ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ತೆರಳಲಿದ್ದು, ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡಲು ನಿವೇಶನ ನೀಡುವಂತೆ ರಾಜ್ಯ ಸರ್ಕಾರ ಈಗಾಗಲೇ ಎರಡು ಬಾರಿ ಮನವಿ ಮಾಡಿದೆ.
ಇದನ್ನೂ ಓದಿ: Rama Mandir : ರಾಮ ಮಂದಿರಕ್ಕೆ ವಿರೋಧ ; ಸುಳ್ಳು ಸುದ್ದಿ ಹರಡಬೇಡಿ ಎಂದ ಶೃಂಗೇರಿ ಶ್ರೀಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ 2020ರಲ್ಲಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು.
ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಸ್ಪಂದಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.