ಬೆಂಗಳೂರು: ಮಂಡ್ಯದಲ್ಲಿ ಜರುಗಲಿರುವ ಮುಂದಿನ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಈ ಬಾರಿಯ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ೨೫ ಕೋಟಿ ರೂ. ಅನುದಾನವಾಗಿ ಕಾಯ್ದಿರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಮನವಿ ಮಾಡಿದ್ದಾರೆ.
ಮೂರು ದಿನಗಳ ಕಾಲ ಹಾವೇರಿಯಲ್ಲಿ ನಡೆದ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅಭೂತಪೂರ್ವ ಯಶಸ್ಸು ಕಂಡು, ಜನಮಾನಸದಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದೆ. ಈ ಸಮ್ಮೇಳನದ ಯಶಸ್ಸಿಗೆ ಸ್ವತಃ ಮುಖ್ಯಮಂತ್ರಿಗಳೇ ಸ್ವಾಗತ ಸಮಿತಿಯ ಮಹಾಪೋಷಕರಾಗಿ ವಹಿಸಿದ ಶ್ರಮ ಅತ್ಯಂತ ಶ್ಲಾಘನೀಯವಾದುದು ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ನಡೆದ ಸಮ್ಮೇಳನಕ್ಕೆ ೨೦ ಕೋಟಿ ರೂಪಾಯಿಗಳ ಅನುದಾನ ನೀಡುವುದರ ಜತೆಗೆ, ಸರ್ಕಾರದ ವತಿಯಿಂದ ಅಗತ್ಯ ಸಹಕಾರ, ಸಹಯೋಗ ನೀಡುವ ಮೂಲಕ ಸಮ್ಮೇಳನ ಯಶಸ್ವಿ ಆಗಿತ್ತು. ಈ ಮುಂದೆ ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷಾನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಮೀಸಲಿಡಬೇಕೆಂದು ಮನವಿ ಮಾಡಿರುವುದಾಗಿ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಜರುಗಿಸಲಾಗುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಘಟಿಸಲು ಅನುಕೂಲವಾಗುವಂತೆ ಪ್ರಸಕ್ತ ವರ್ಷದಲ್ಲಿ ಮಂಡಿಸಲಿರುವ ಆಯವ್ಯಯದಲ್ಲಿ ೨೫ ಕೋಟಿ ರೂಪಾಯಿಗಳ ಅನುದಾನವನ್ನು ಕಾಯ್ದಿರಿಸುವ ಭರವಸೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.