ಬಾಗಲಕೋಟೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಫೆಬ್ರವರಿ 25ರಂದು ಬಾಗಲಕೋಟೆ ತಾಲೂಕಿನ ಬೀಳಗಿ ವಿಧಾನಸಭಾ ಕ್ಷೇತ್ರದ ಕಲಾದಗಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ (Village Stay) ಮಾಡಲಿದ್ದಾರೆ.
ಶನಿವಾರ ಬೆಳಗ್ಗೆ 11.30ಕ್ಕೆ ಕಲಾದಗಿ ಗ್ರಾಮಕ್ಕೆ ಆಗಮಿಸಲಿರುವ ಕಂದಾಯ ಸಚಿವರಿಗೆ ಗ್ರಾಮದ ಮಹಿಳೆಯರು ಆರತಿ ಮಾಡುವ ಮೂಲಕ ಸ್ವಾಗತಿಸಲಿದ್ದಾರೆ. ನಂತರ ಅಲಂಕೃತಗೊಂಡ ಟ್ರ್ಯಾಕ್ಟರ್ ಮೂಲಕ ಗ್ರಾಮದಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ. ಇನ್ನು ವೇದಿಕೆ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಪರಿಕರ ವಿತರಿಸುವ ಮೂಲಕ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಆರ್.ಅಶೋಕ್ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ | B.S. Yediyurappa: ಯೋಜನೆಗಳ ಮೂಲಕ ಜನಮಾನಸದಲ್ಲಿ ಬಿ.ಎಸ್. ಯಡಿಯೂರಪ್ಪ ಅಜರಾಮರ: ಎಸ್.ಎಂ. ಕೃಷ್ಣ ಪತ್ರ
ಅಲ್ಲದೇ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಅರ್ಹ ಫಲಾನುಭವಿಗಳಿಗೆ ಪತ್ರ ವಿತರಿಸಿ, ಕಾರ್ಯಕ್ರಮ ಕುರಿತು ಮಾತನಾಡಲಿದ್ದಾರೆ. ಸಂಜೆ ವೇಳೆ ಗ್ರಾಮಸ್ಥರ ಅಹವಾಲು ಸ್ವೀಕಾರ ಕಾರ್ಯಕ್ರಮ, ಗ್ರಾಮ ಸಭೆ, ವಿವಿಧ ಸಾಂಸ್ಕತಿಕ ಕಾರ್ಯಕ್ರಮಗಳು ಜರುಗಲಿವೆ. ನಂತರ ಖಜ್ಜಿಡೋಣಿ ಗ್ರಾಮದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ಶಾಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ ವಾಸ್ತವ್ಯ ಹೂಡಲಿದ್ದಾರೆ. ಇವರ ಜತೆ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಟಿ.ಭೂಬಾಲನ್ ಸೇರಿ ಇತರೆ ಅಧಿಕಾರಿಗಳು ವಾಸ್ತವ್ಯ ಮಾಡಲಿದ್ದಾರೆ.