ವಿಜಯಪುರ: ಆ ಎರಡು ಕುಟುಂಬಗಳು ಹೊಸ ಅತಿಥಿಯ ಆಗಮನದಲ್ಲಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಚಾಲಕನ ಅಜಾಗರೂಕತೆಯಿಂದಾಗಿ ಎರಡು ಜೀವಗಳು ಪ್ರಾಣ ಕಳೆದುಕೊಂಡಿವೆ. ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ವಾಹನವು ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಹೊಟ್ಟೆಯೊಳಗಿದ್ದ ಶಿಶು ಸಹಿತ ಗರ್ಭಿಣಿ ಆಂಬ್ಯುಲೆನ್ಸ್‌ನೊಳಗೆ ಮೃತಪಟ್ಟಿದ್ದಾರೆ.
ಭಾಗ್ಯಶ್ರೀ ರಾವುತಪ್ಪ ಪಾರಣ್ಣನವರ (19) ಮೃತ ದುರ್ದೈವಿ. ಕಳೆದ ಒಂದೂವರೆ ವರ್ಷದ ಹಿಂದೆ ತಾಳಿಕೋಟೆ ತಾಲೂಕಿನ ನಾವದಗಿ ಗ್ರಾಮದ ಭಾಗ್ಯಶ್ರೀಗೆ ರಾವುತಪ್ಪ ಎಂಬುವವರ ಜತೆಗೆ ವಿವಾಹವಾಗಿತ್ತು. ಮೊದಲ ಹೆರಿಗೆಗಾಗಿ ಭಾಗ್ಯಶ್ರೀ ತವರು ಮನೆಗೆ ತೆರಳಿದ್ದರು. ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ತವರು ಮನೆ ನಾವದಗಿಯಿಂದ ತಾಳಿಕೋಟೆ ಸಮುದಾಯ ಆಸ್ಪತ್ರೆಗೆ ಕರೆತಂದಿದ್ದರು.
ಆದರೆ ಭಾಗ್ಯಶ್ರೀ ಆರೋಗ್ಯದಲ್ಲಿ ಏರುಪೇರಾದ ಕಾರಣಕ್ಕೆ ತಾಳಿಕೋಟೆ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಗಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದರು. ಜಿಲ್ಲಾಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಆಗಮಿಸುತ್ತಿದ್ದಾಗ ಏಕಾಏಕಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ತಾಯಿ-ಮಗು ಇಬ್ಬರು ಅಸುನೀಗಿದ್ದಾರೆ.
ಮೃತ ಭಾಗ್ಯಶ್ರೀ ಪೋಷಕರು ತಾಳಿಕೋಟೆ ಸಮುದಾಯ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ವೈದ್ಯಾಧಿಕಾರಿ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಆಂಬ್ಯುಲೆನ್ಸ್‌ನಲ್ಲಿದ್ದ ಇಬ್ಬರು ಸ್ಟಾಫ್ ನರ್ಸ್ ಹಾಗೂ ಒರ್ವ ಸಹಾಯಕನಿಗೆ ಗಾಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಸಾವು
ತುಮಕೂರಿನ ಊರುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ವಾಹನವು ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕ್ಯಾಂಟರ್‌ನಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ಸಾವನ್ನಪ್ಪಿದ್ದಾರೆ. ಮೃತರು ಹಾಸನ ಹಾಗೂ ಚಿತ್ರದುರ್ಗ ಮೂಲದವರು ಎನ್ನಲಾಗಿದೆ.
ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು
ಇತ್ತೀಚೆಗೆ ಅಪಘಾತ ಪ್ರಕರಣಗಳು (Road Accident) ಹೆಚ್ಚಾಗುತ್ತಿದ್ದು, ಸಾವು ನೋವಿಗೆ ಕಾರಣವಾಗುತ್ತಿದೆ. ಬಳ್ಳಾರಿಯ ಕುಂಟನಾಳ್ ಬಳಿ ತಡರಾತ್ರಿ ನಡೆದ ಬೈಕ್ ಮತ್ತು ಲಾರಿ ಅಪಘಾತದಲ್ಲಿ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ.
ಬೈಕ್‌ಗೆ ಲಾರಿಯು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಮಾರೇಶ್ (28) ಮೃತ ದುರ್ದೈವಿ.
ಮಾರೇಶ್ ಪತ್ನಿ- ಮಕ್ಕಳನ್ನು ನೋಡಿಕೊಂಡು ವಾಪಸ್ಸು ಬರುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಮಾರೇಶ್ ಸ್ಥಳದಲ್ಲೇ ಜೀವ ಬಿಟ್ಟಿದ್ದಾನೆ.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.