Site icon Vistara News

Road Accident: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ತಮಿಳುನಾಡಲ್ಲಿ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

Road accident in Tamil Nadu while on election duty Two including Karnataka policeman killed

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಐವರು ಪೊಲೀಸ್‌ ಅಧಿಕಾರಿಗಳು ಹೋಗುತ್ತಿದ್ದ ಜೀಪ್‌ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಬಸ್‌ಗೆ ಡಿಕ್ಕಿಯಾದ (Road Accident) ಪರಿಣಾಮ ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.

ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲೀಸ್ ಅಧಿಕಾರಿ, ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ. ಸಂಜೆ ನಾಲ್ಕು ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಇಬ್ಬರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕರ್ನಾಟಕ ಪೊಲೀಸರಿಗೆ ಹಸ್ತಾಂತರ ಮಾಡಲಾಗುವುದು. ಮೃತಪಟ್ಟಿರುವ ಬಗ್ಗೆ ಪ್ರಭಾಕರ್ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಸ್ ಮತ್ತು ಜೀಪ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಜೀಪ್‌ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ ದೊಡ್ಡ ಪ್ರಮಾಣದಲ್ಲಿ ಜಖಂ ಆಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ವಿಟ್ಠಲ್ ಗಡಾದರ್ (ಹೆಡ್ ಕಾನ್ಸ್‌ಟೇಬಲ್), ಜಯಕುಮಾರ್ (ಕಾನ್ಸ್‌ಟೇಬಲ್) ಮೂವರನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Road Accident : ಬಸ್‌ ಗುದ್ದಿದ ರಭಸಕ್ಕೆ ಅಪ್ಪಚ್ಚಿಯಾದ ಓಮ್ನಿ ಕಾರು; ಮೂವರು ದಾರುಣ ಸಾವು

ಶಿವಮೊಗ್ಗ/ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂದು ತಿಳಿದು ಬಂದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಅಪ್ಪಚ್ಚಿ ಆಗಿತ್ತು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದರು. ಇನ್ನೂ ಬಸ್ಸಿನ ಮುಂಭಾಗವು ಛಿದ್ರಗೊಂಡಿತ್ತು.

ಇದನ್ನೂ ಓದಿ: Honeybee Attack : ಹುಲಿ ‌ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ; ಬೆದರಿ ಓಡಿ‌ದ ಸಾಕಾನೆ ಭೀಮ

ಘಟನೆಯಲ್ಲಿ ಆರಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಣ್ಣ ಪುಟ್ಟ ಗಾಯಗೊಂಡವರನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನ್ಯಾಮತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನ್ಯಾಮತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

Exit mobile version