Site icon Vistara News

Road Accident : ಬೈಕ್‌ ಸವಾರರಿಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಪರಾರಿ

Lorry hit bike

ಯಾದಗಿರಿ: ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಲಾರಿ ಗುದ್ದಿದ ರಭಸಕ್ಕೆ ಬೈಕ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣ (21), ಆಕಾಶ್‌ (19) ಮೃತರು.

ಕೃಷ್ಣ ಹಾಗೂ ಆಕಾಶ್‌ ಇಬ್ಬರು ಮಾತಾಮಾಣಿಕೇಶ್ವರಿ ನಗರದವರು ಎನ್ನಲಾಗಿದೆ. ಹೊಸಹಳ್ಳಿ ಕ್ರಾಸ್‌ ಬಳಿ ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿ ಆಗಿದ್ದಾನೆ.

ಘಟನಾ ಸ್ಥಳಕ್ಕೆ ಯಾದಗಿರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ದಂಪತಿಗೆ ನಟ ನಾಗಭೂಷಣ ಕಾರು ಡಿಕ್ಕಿ, ಮಹಿಳೆ ಸಾವು; ಹಿಟ್‌ ಆ್ಯಂಡ್‌ ರನ್?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಇತ್ತೀಚೆಗೆ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಟಿಸಿರುವ ನಾಗಭೂಷಣ ಅವರ (Actor Nagabhushana) ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್‌ 30) ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಬನ್ನೇರುಘಟ್ಟಲದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೃಷ್ಣ ಹಾಗೂ ಪ್ರೇಮಾ.

ಉತ್ತರಹಳ್ಳಿ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ರಾತ್ರಿ 9.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕೃಷ್ಣ ಹಾಗೂ ಪ್ರೇಮಾ ದಂಪತಿಯ ಪುತ್ರ ಪಾರ್ಥ ಎಂಬುವರು ಕುಮಾರಸ್ವಾಮಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಪಾರ್ಟ್‌ಮೆಂಟ್‌ ಬಳಿಯ ಫುಟ್‌ಪಾತ್‌ ಮೇಲೆ ವಾಕಿಂಗ್‌ ಮಾಡುವಾಗ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರತಿ

ಕೃಷ್ಣ ಅವರ ಪರಿಸ್ಥಿತಿಯೂ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೃಷ್ಣ ಅವರ ಕೈ, ಕಾಲು ಹಾಗೂ ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತ ಪ್ರೇಮಾ ಅವರ ಶವವನ್ನು ಕಿಮ್ಸ್‌ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದಾಗ್ಯೂ, ಅಪಘಾತದ ಕುರಿತು ಇದುವರೆಗೆ ನಟ ನಾಗಭೂಷಣ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version