ಆನೇಕಲ್: ರಾಜ್ಯದ ಮೂರು ಕಡೆ ಪ್ರತ್ಯೇಕ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರೆ, ಹಲವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಮಕೃಷ್ಣಾಪುರ ಗೇಟ್ ಬಳಿ ಪಾದಚಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಗುದ್ದಿದೆ. ಜು 4ರಂದು ಬೆಳಗ್ಗೆ 6.30ರ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತ ನಡೆಸಿ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಮೃತಪಟ್ಟ ಪಾದಚಾರಿ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾಗಿರುವ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಭೀಕರ ಅಪಘಾತದಲ್ಲಿ ಮಹಿಳೆ ಮೃತ್ಯು
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮುಂಬೈ ಮೂಲದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದವರನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: Suicide Case: ಪತಿಯ ಅನೈತಿಕ ಸಂಬಂಧದಿಂದ ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಸುಂಟಿಕೊಪ್ಪದ ಗದ್ದೆಹಳ್ಳ ಬಳಿಯ ವಂದನ ಬಾರ್ ಎದುರು ನಡೆದಿರುವ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಾರಿ ಚಾಲಕನ ಅಜಾಗರೂಕತೆಯೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದತ್ತ ಕಾರು ಬರುತ್ತಿತ್ತು, ಎದುರಿಗೆ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದು ದೂರಕ್ಕೆ ಎಳೆದು ಹೋಗಿದೆ. ಬಾರ್ ರಸ್ತೆಯ ಎದುರಿನಲ್ಲಿ ನಿಲ್ಲಿಸಿದ್ದ ಮೂರ್ನಾಲ್ಕು ಸ್ಕೂಟರ್, ಬೈಕ್‌ಗಳು ಜಖಂಗೊಂಡಿವೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಖಾಸಗಿ ಬಸ್- ಟ್ಯಾಂಕರ್ ನಡುವೆ ಡಿಕ್ಕಿ
ಹಾಸನ ಜಿಲ್ಲೆ ಆಲೂರು ತಾಲೂಕಿನ ಭರತವಳ್ಳಿ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಟ್ಯಾಂಕರ್ ಚಾಲಕನ ಕಾಲು ಮುರಿದಿದ್ದು, ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ