Site icon Vistara News

Saffron politics| ವಿವೇಕ ಶಾಲೆ ಕೊಠಡಿಗಳಿಗೆ ಕೇಸರಿ ಬಣ್ಣ: ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ

CM Bommai

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ವಿವೇಕ ಕೊಠಡಿಗಳ ಸ್ಥಾಪನೆ ಮತ್ತು ಅದಕ್ಕೆ ಕೇಸರಿ ಬಣ್ಣ ಬಳಿಯುವ ಸರಕಾರದ ತೀರ್ಮಾನ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ನಡೆಯನ್ನು ಸಮರ್ಥಿಸಿದ್ದಾರೆ.

ರಾಜ್ಯದ ಸರಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ 8,100 ಹೊಸ ಕೊಠಡಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಕಲಬುರಗಿಗೆ ಹೊರಟ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ʻʻಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳಮಟ್ಟದ್ದುʼʼ ಎಂದು ಹೇಳಿದರು.

ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅವರು ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ಕಾಂಗ್ರೆಸ್ ವಿರೋಧದ ಬಗ್ಗೆ ಸುದ್ದಿಗಾರರ ಪ್ರತಿಕ್ರಿಯಿಸಿ, ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ ಎಂದರು.

ಸಚಿವ ಬಿ.ಸಿ. ನಾಗೇಶ್‌ ಹೇಳಿಕೆ ಸಮರ್ಥನೆ
ಶಾಲೆಗಳಿಗೆ ಕೇಸರಿ ಬಣ್ಣ ಹಚ್ಚುವ ವಿಚಾರಕ್ಕೆ ಸಂಬಂಧಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಭಾನುವಾರ ಹೇಳಿಕೆ ನೀಡಿ, ಕೊಠಡಿಗಳಿಗೆ ಯಾವ ಬಣ್ಣ ಹಾಕಬೇಕು ಎಂದು ತೀರ್ಮಾನಿಸಿಲ್ಲ. ಒಂದು ವೇಳೆ ಆರ್ಕಿಟೆಕ್ಟ್‌ ಕೇಸರಿ ಬಣ್ಣ ಚೆನ್ನಾಗಿ ಕಾಣುತ್ತದೆ ಎಂದು ಹೇಳಿದರೆ ಅದನ್ನೇ ಹಾಕುತ್ತೇವೆ ಎಂದು ಸವಾಲು ಹಾಕಿದ್ದರು. ಈಗ ಸಿಎಂ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿ ಸಮರ್ಥಿಸಿದಂತಾಗಿದೆ.

ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗಿ?
ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ದಿನಾಚರಣೆ ಹಾಗೂ ʻವಿವೇಕʼ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಮತ್ತು ಜೇವರ್ಗಿ ಶಾಸಕ ಡಾ. ಅಜಯ ಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹಾಗೂ ಕಲಬುರಗಿ ಸಂಸದ ಡಾ. ಉಮೇಶ ಜಿ. ಜಾಧವ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕರಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಕನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ್‌, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ತಳವಾರ ಸಾಬಣ್ಣಾ ಅವರನ್ನೂ ಆಹ್ವಾನಿಸಲಾಗಿದೆ.

ಇದನ್ನೂ ಓದಿ | ಅವಿವೇಕಿ ಶಿಕ್ಷಣ ಸಚಿವ ರಾಜೀನಾಮೆ ನೀಡಲಿ: ಬಿ.ಸಿ. ನಾಗೇಶ್‌ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Exit mobile version