ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರದ ನಂತರ ಬಂಜಾರ ಸಮುದಾಯದವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯ ಆಂತರಿಕ ಸಮಸ್ಯೆಯ ಕಾರಣಕ್ಕೆ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಈ ರೀತಿ ಮಾತನಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಬಿಜೆಪಿಯವರದ್ದೇ ಕೈವಾಡ ಇರಬಹುದು. ಯಡಿಯೂರಪ್ಪ ಕಾಂಗ್ರೆಸ್ ವಿರುದ್ದ ಹೇಳಿಲ್ಲ. ತಪ್ಪು ಗ್ರಹಿಕೆಯಿಂದ ಆಗಿರಬೇಕು ಅಂತ ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್ ಬಿಜೆಪಿ ಕಳೆದ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿತ್ತು ಎಂಬ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಪ್ಪಿ ತಪ್ಪಿ ಸತ್ಯ ಹೇಳಿಬಿಟ್ಟಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಯಡಿಯೂರಪ್ಪನವರು ಸರ್ಕಾರದ ಪ್ರತಿನಿಧಿಯಾಗಿ ಎಲ್ಲೂ ಭಾಗಿಯಲ್ಲ. ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿಗಳು ದೊಡ್ಡ ಗೊಂದಲ ಸೃಷ್ಟಿ ಮಾಡಿದ್ದಾರೆ. ಈಗ ಯಡಿಯೂರಪ್ಪ ಅವರನ್ನು ಮತ್ತೆ ಸೆಂಟರ್ ಸ್ಟೇಜ್ ಗೆ ತರಬೇಕು ಅಂತ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಮನೆಗೆ ಹೋಗಿ ಭೇಟಿ ಮಾಡಿ ಬೆನ್ನು ತಟ್ಟಿ ಬಂದಿದ್ದಾರೆ. ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೆವು, ಈಗ ಸರಿಮಾಡಿಕೊಳ್ಳುತ್ತೇವೆ ಎಂದು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: SC ST Reservation: 2B ಪ್ರವರ್ಗ ಹಿಂತೆಗೆತಕ್ಕೆ ಸಿಡಿದ ಮುಸ್ಲಿಮರು; ರಾಜ್ಯದ ಹಲವು ಕಡೆ ಬೃಹತ್ ಪ್ರತಿಭಟನೆ
ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ಹೊಡೆಯುತ್ತಾರೆ ಅಂದರೆ ಕಾರಣ ಏನು? ಇದು ಬಿಜೆಪಿಯ ಆಂತರಿಕ ಕುತಂತ್ರ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಬೇಕು ಅಂತ ಕಲ್ಲು ಹೊಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳ ಮನೆ ಮೇಲೆ ಕಲ್ಲು ಹೊಡೆದಿದ್ರೆ ಅದೊಂಥರಾ ಓಕೆ ಫೈನ್. ಅಧಿಕಾರದಲ್ಲಿರುವವರ ಮನೆ ಮೇಲೆ ಕಲ್ಲು ಹೊಡೆಯುವುದು, ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ ಯಡಿಯೂರಪ್ಪ ಅವರ ಮನೆ ಮೇಲೆ ಮಾಡ್ತಾರೆ ಅಂದರೆ ಇದು ಬಿಜೆಪಿಯ ಆಂತರಿಕ ಸಮಸ್ಯೆ ಎಂದಿದ್ದಾರೆ.
ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಎಂದು ಪದೇಪದೇ ಹೇಳುತ್ತಿರುವ ಕಾಂಗ್ರೆಸ್ ಇದೀಗ ಮನೆ ಮೇಲಿನ ಕಲ್ಲು ತೂರಾಟವನ್ನೂ ಚುನಾವಣಾ ಅಸ್ತ್ರವಾಗಿ ಬಳಕೆ ಮಾಡುತ್ತಿದೆ. ಬಿಜೆಪಿ ಜತೆಗಿರುವ ವೀರಶೈವ ಲಿಂಗಾಯತ ಮತದಾರರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಬಯಸಿದ್ದು, ಅದಕ್ಕೆ ಯಡಿಯೂರಪ್ಪ ಅವರಿಗೆ ಅವಮಾನ ವಿಚಾರವನ್ನು ಪ್ರಸ್ತಾಪಿಸುತ್ತಿದೆ.