ಶಿವಮೊಗ್ಗ: ಎಸ್‌ಸಿ-ಎಸ್‌ಟಿ ಮೀಸಲಾತಿಯಲ್ಲಿ (SC ST Reservation) ಒಳ ಮೀಸಲಾತಿ ನಿಗದಿಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ವಿರೋಧ ವಿರೋಧ ವ್ಯಕ್ತವಾಗಿದೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಹೊತ್ತಿಕೊಂಡಿರುವ ಕಿಡಿ ರಾಜ್ಯಾದ್ಯಂತ ವ್ಯಾಪಿಸುತ್ತಿರುವ ಬೆನ್ನಲ್ಲೇ ಶಿವಮೊಗ್ಗದಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ತಯಾರಿ ನಡೆದಿದೆ. ಮಾ. 30ಕ್ಕೆ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಬಳಿಕ ಶಿಕಾರಿಪುರ ಚಲೋ ನಡೆಸಲು ಚಿಂತನೆ ನಡೆಸಲಾಗಿದೆ.
ಎಸ್‌ಎಸಿ-ಎಸ್‌ಟಿ ಮೀಸಲಾತಿಯಲ್ಲಿ ಒಳ ಮೀಸಲು ಮಾಡಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿತ್ತು. ಇದರಿಂದ ಸೋಮವಾರ (ಮಾ. 27) ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಸಿಡಿದೆದ್ದು, ತೀವ್ರ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಲಾಗಿತ್ತು. ಮಂಗಳವಾರ (ಮಾ. 28) ಶಿವಮೊಗ್ಗದ ಕುಂಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದರು. ಈಗ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಲಾಗಿದೆ.
ಮಾ. 30ಕ್ಕೆ ಬೃಹತ್ ಪ್ರತಿಭಟನೆ
ಮೀಸಲಾತಿ ಕಡಿತಕ್ಕೆ ಬಂಜಾರ ಸಮುದಾಯದವರ ಆಕ್ರೋಶ ಮುಂದುವರಿದಿದ್ದು, ಸರ್ಕಾರದ ವಿರುದ್ಧ ಕುದಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ಸಾಲು, ಸಾಲು ಸಭೆ ನಡೆಸಲಾಗಿದೆ. ಈ ಮೂಲಕ ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚೆ ನಡೆಸಲಾಗಿದೆ. ಮಾ. 30ಕ್ಕೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಆದರೆ, ಸಭೆಗೆ ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಲಾಗಿತ್ತು.
ಶಿಕಾರಿಪುರ ಚಲೋ ಬಗ್ಗೆಯೂ ಈ ವೇಳೆ ಚರ್ಚೆ ನಡೆದಿದೆ. ಅದು ಯಾವಾಗ ಮಾಡಬೇಕು? ಯಾವ ರೀತಿ ಇರಬೇಕು? ಎಷ್ಟು ಜನ ಸೇರಬೇಕು? ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಮೀಸಲಾತಿ ಸಂರಕ್ಷಣಾ ಒಕ್ಕೂಟದ ಸದಸ್ಯರು ಸಹ ಈ ಸಭೆಯಲ್ಲಿ ಭಾಗಿಯಾಗಿದ್ದರು.
ಅಖಿಲ ಭಾರತ ವೀರಶೈವ ಮಹಾಸಭಾ ಪ್ರತಿಭಟನೆ
ಎಸ್‌ಸಿ-ಎಸ್‌ಟಿ ಮೀಸಲಾತಿಯಲ್ಲಿ (SC ST Reservation) ಒಳ ಮೀಸಲಾತಿ ನಿಗದಿಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ವಿರೋಧ ವಿರೋಧ ವ್ಯಕ್ತವಾಗಿದೆ. ಸೋಮವಾರ (ಮಾ. 27) ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ನಡೆಸಿದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಲಾಗಿತ್ತು. ಪ್ರತಿಭಟನಾಕಾರರ ಈ ಕೃತ್ಯವನ್ನು ಖಂಡಿಸಿ ಸಾಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಪ್ರತಿಭಟನೆ ನಡೆಸಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿರುವುದು ಅತ್ಯಂತ ಖಂಡನೀಯ. ಶೀಘ್ರವೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಸಾಗರ ಘಟಕವು ಆಕ್ರೋಶ ವ್ಯಕ್ತಪಡಿಸಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರು ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ. ಅವರು ರಾಜಕೀಯ ಜೀವನದಲ್ಲಿ ಎಲ್ಲರನ್ನೂ ಸಮಾನವಾಗಿ ನೋಡಿಕೊಂಡಿದ್ದಾರೆ. ಎಲ್ಲರಿಗೂ, ಎಲ್ಲ ಸಮುದಾಯ, ವರ್ಗಗಳಿಗೂ ಸಾಮಾಜಿಕ ನ್ಯಾಯ ನೀಡಿದ್ದಾರೆ. ಈಗ ಸರ್ಕಾರ ಕೈಗೊಂಡಿರುವ ಕ್ರಮಕ್ಕೂ ಅವರಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಇಷ್ಟಾದರೂ ಅವರ ಮೇಲೆ ಆಕ್ರೋಶಗೊಳ್ಳುವುದು ಸರಿಯಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಹೇಳಿದೆ.
ಇದನ್ನೂ ಓದಿ: Havyaka Awards : ಪೆರುವೋಡಿ, ಲಕ್ಷ್ಮೀಶ ಸೋಂದಾ, ಜಿ.ಎಸ್. ಹೆಗಡೆ ಸಹಿತ 7 ಮಂದಿ ಸಾಧಕರಿಗೆ ಹವ್ಯಕ ವಾರ್ಷಿಕ ವಿಶೇಷ ಪ್ರಶಸ್ತಿ
ಅಲ್ಲದೆ, ಸೋಮವಾರ ಪ್ರತಿಭಟನೆ ವೇಳೆ ಬಿ.ಎಸ್. ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ಘಟನೆ ಹಿಂದಿರುವ ವ್ಯಕ್ತಿಗಳನ್ನು ಬಯಲಿಗೆ ತರಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.