ಮೈಸೂರು: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅವರು ತಮ್ಮ ಮಠ ನಡೆಸುವ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ. ಕೋರ್ಟ್‌ನ ಮಾರ್ಗದರ್ಶನದಂತೆ ಇದೀಗ ಎಫ್‌ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್‌ಪಿಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ. ಸ್ವಾಮೀಜಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ.
ಏನಿದು ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮಠದ ಮೂಲಕ ನಡೆಸಲಾಗುವ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಾ, ವಸತಿ ಶಾಲೆಯಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದು, ಇದಕ್ಕೆ ಅಲ್ಲಿನ ವಾರ್ಡನ್ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಒಬ್ಬ ವಿದ್ಯಾರ್ಥಿನಿ ಮೇಲೆ ಮೂರು ವರ್ಷದಿಂದ ಇನ್ನೊಬ್ಬ ವಿದ್ಯಾರ್ಥಿನಿ ಮೇಲೆ ಒಂದೂವರೆ ವರ್ಷದಿಂದ ದೌರ್ಜನ್ಯ ನಡೆಯುತ್ತಿದೆ ಎನ್ನಲಾಗಿದೆ. ಅವರಿಬ್ಬರು ಮಹಿಳಾ ರಕ್ಷಣಾ ಸಮಿತಿ ಮತ್ತು ಸಾಂತ್ವನ ಕೇಂದ್ರವಾದ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದರು. ಸಂಸ್ಥೆಯು ಅವರಿಬ್ಬರನ್ನೂ ಕರೆಸಿಕೊಂಡು ಆಪ್ತ ಸಮಾಲೋಚನೆಯ ಮೂಲಕ ದೌರ್ಜನ್ಯದ ವಿವರಗಳನ್ನು ಪಡೆದುಕೊಂಡು ಇದೀಗ ಚಂದ್ರಕುಮಾರ್ ಎಂಬವರ ಮೂಲಕ ಪೊಲೀಸರಿಗೆ ದೂರು ನೀಡಿದೆ.
ಹೇಗೆ ದೌರ್ಜನ್ಯ, ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರಲ್ಲದೆ, ಅವರಿಗೆ ಸಹಕಾರ ನೀಡಿದ ಆರೋಪದಲ್ಲಿ ವಸತಿ ಶಾಲೆಯ ವಾರ್ಡನ್ ಆಗಿರುವ ರಶ್ಮಿ, ಮಠಕ್ಕೆ ಸಂಬಂಧಿಸಿದ ಬಸವಾದಿತ್ಯ, ಲಾಯರ್ ಗಂಗಾಧರ್ ಮತ್ತು ಲೀಡರ್ ಪರಮಶಿವಯ್ಯ ಅವರ ವಿರುದ್ಧ ದೂರು ದಾಖಲಾಗಿದೆ.
ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿಗಳ ಬಳಿಗೆ ಕಳುಹಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿಯೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎನ್ನಲಾಗಿದೆ. ಅದಕ್ಕಿಂತಲೂ ಗಂಭೀರವಾದ ಇನ್ನೊಂದು ಆರೋಪವೆಂದರೆ ವಿದ್ಯಾರ್ಥಿನಿಯರನ್ನು ಹೀಗೆ ಲೈಂಗಿಕವಾಗಿ ಬಳಸಿಕೊಳ್ಳುವ ಮುನ್ನ ಕುಟುಂಬಸ್ಥರಿಗೆ ಸಹಾಯ ಹಸ್ತ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು, ಸಿಹಿಯಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಕಿರುಕುಳವನ್ನು ಪ್ರಶ್ನಿಸಿದ ಕಾರಣಕ್ಕೆ ಈ ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ನಿಂದ ಹೊರ ಹಾಕಲಾಗಿದೆ ಎನ್ನಲಾಗಿದೆ.