Site icon Vistara News

Sharavathi Drowned Victim | ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಹಕ್ಕು ನೀಡುವ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಸಂಸದ ರಾಘವೇಂದ್ರ

MP B Y Raghavendra Sharavathi drowning victims

ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಅವರು ಸಂಸತ್ ಅಧಿವೇಶನದ ಬುಧವಾರ (ಡಿ.೨೧) ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ (Sharavathi drowned victim) ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರ ಗಮನ ಸೆಳೆದರು.

ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾದ ಪ್ರದೇಶದಿಂದ ಸ್ಥಳಾಂತರಗೊಂಡ ಕುಟುಂಬಗಳಿಗೆ ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿನ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಅವಕಾಶ ನೀಡಲಾಗಿತ್ತು. ಆದರೆ 1959 ರಿಂದ ಕಂದಾಯ ದಾಖಲೆಗಳಲ್ಲಿ ರೈತರ ಹೆಸರು ನಮೂದಾಗಿಲ್ಲ. ಮಲೆನಾಡು ಪ್ರಾಂತ್ಯವಾದ ಶಿವಮೊಗ್ಗ ಜಿಲ್ಲೆಯ ಈ ಭಾಗದ ಪ್ರಮುಖ ರೈತರು ಈಡಿಗ, ಇತರೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರಾಗಿದ್ದು, ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Toilet Flush | ಪಬ್ಲಿಕ್‌ ಟಾಯ್ಲೆಟ್‌ಗಳಲ್ಲಿ ಫ್ಲಶ್‌ ಮಾಡುವವರಿಗೆ ವಿಜ್ಞಾನಿಗಳ ಎಚ್ಚರಿಕೆ ಏನು? ಇಲ್ಲಿದೆ ವಿಡಿಯೊ

ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯ ಸಂರಕ್ಷಣಾ ಕಾಯಿದೆ-1980 ಕ್ಕಿಂತ ಮೊದಲು ಅದನ್ನು ಮಾಡಬೇಕಾಗಿತ್ತು ಮತ್ತು ಭೂಮಿಯನ್ನು ಡಿ-ನೋಟಿಫೈ ಮಾಡಬೇಕಾಗಿತ್ತು. ಆದರೆ ಆಗಿನ ಸರ್ಕಾರದ ನಿರ್ಲಕ್ಷ್ಯದಿಂದ ಅದು ಆಗಲಿಲ್ಲ. ಇದರಿಂದಾಗಿ ಈ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಸರ್ಕಾರದ ಯಾವುದೇ ಯೋಜನೆಗಳಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಈ ಸಾವಿರಾರು ರೈತರ ಜಮೀನಿಗೆ ಹಕ್ಕುಪತ್ರ ನೀಡಬೇಕೆಂಬ ಬಹುದಿನಗಳ ಬೇಡಿಕೆ ಇಂದಿಗೂ ಈಡೇರಿಲ್ಲ ಎಂದು ಹೇಳಿದರು.

ಅರಣ್ಯ ಸಂರಕ್ಷಣಾ ಕಾಯ್ದೆ-1980 ಜಾರಿಗೆ ಬಂದ ನಂತರ ಅರಣ್ಯ ಭೂಮಿಯ ಡಿ-ನೋಟಿಫಿಕೇಶನ್ ಅನ್ನು ಕೇಂದ್ರ ಸರ್ಕಾರ ಮಾತ್ರ ಮಾಡಬಹುದಾಗಿದೆ. ಆದ್ದರಿಂದ ಈಗ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದಿಂದ ವಿವರವಾದ ಪ್ರಸ್ತಾವನೆಯನ್ನು ಪಡೆದು ಭೂಮಿಯ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಆ ರೈತರ ಜೀವನೋಪಾಯವನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ. ಶರಾವತಿ ಜಲವಿದ್ಯುತ್ ಯೋಜನೆಯ ಎಲ್ಲ ನಿರಾಶ್ರಿತ ಕುಟುಂಬಗಳಿಗೆ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಮಾಡುವ ಮೂಲಕ ವಿಳಂಬ ಮಾಡದೆ ತಕ್ಷಣವೇ ಡಿ-ನೋಟಿಫಿಕೇಶನ್ ಹೊರಡಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ | ಜನವರಿ 12ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ; ಯುವಜನೋತ್ಸವಕ್ಕೆ ಭರ್ಜರಿ ತಯಾರಿ ಆರಂಭ

Exit mobile version