ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ನಡೆದ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಜಿಲ್ಲೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯ ಬೆನ್ನಲ್ಲೇ 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ (ಆ.೧೬) ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಭಾಗವಹಿಸಿದ್ದರು. ಈ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೇ ನಾಳೆ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.
ಶಾಂತಿ ಕಾಪಾಡುವಂತೆ ನಾಗರಿಕರಿಗೆ ಮನವಿ ಮಾಡಿದ ಸಚಿವರು, ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಗಾಯಾಳು ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಕುವೆಂಪು ವಿವಿಗೂ ರಜೆ
ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಮಂಗಳವಾರ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ರಜೆ ನೀಡಲಾಗಿದೆ. ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿ, ಪ್ರಕಟಣೆ ಹೊರಡಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಂಗಳವಾರ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಉಸ್ತುವಾರಿ ಸಚಿವರು ಬೆಳಗ್ಗೆ ಧ್ವಜಾರೋಹಣ ನಡೆಸಿ, ಬಳಿಕ ಸಿಗಂಧೂರಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮರಳಿದ್ದರು. ಆಗ ಶಿವಮೊಗ್ಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ| Shivamogga Clash | ಶಿವಮೊಗ್ಗ ಉದ್ವಿಗ್ನ; ಹಲವೆಡೆ ಹೈ ಅಲರ್ಟ್