ಶಿವಮೊಗ್ಗ: ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಬಂಜಾರ ಕನ್ವೆನ್ಷನ್ ಹಾಲ್ ಜ.3೦ರಂದು ಮಧ್ಯಾಹ್ನ 3ಕ್ಕೆ ಉದ್ಘಾಟನೆಗೊಳ್ಳಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಸಮಿತಿಯ ಜಿಲ್ಲಾಧ್ಯಕ್ಷ ಶಾಸಕ ಕೆ.ಬಿ. ಅಶೋಕ ನಾಯ್ಕ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಂಜಾರ ಕನ್ವೆನ್ಷನ್ ಹಾಲ್ ಮತ್ತು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಮಫಲಕ ಅನಾವರಣ ಮಾಡಲಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಭೋಜನಾಲಯ, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ವಿಶ್ರಾಂತಿ ಗೃಹ ಉದ್ಘಾಟಿಸಲಿದ್ದಾರೆ. ಕೌಶಲ್ಯ ತರಬೇತಿ ಕೇಂದ್ರದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಬಂಜಾರ ಸಮಿತಿ ಅಧ್ಯಕ್ಷ ಕೆ.ಬಿ. ಅಶೋಕ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಜನಾಂಗದ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿರುವರು ಎಂದರು.
ಇದನ್ನೂ ಓದಿ | ಟಿಪ್ಪು ವಿವಾದ : ಬಜರಂಗ ದಳ ಪ್ರತಿಭಟನೆ ಬಳಿಕ ಶಿವಮೊಗ್ಗ ಪಾಲಿಕೆ ಕಚೇರಿಯಲ್ಲಿ ಹಾಕಿದ್ದ ಟಿಪ್ಪು ಫೋಟೊ ತೆರವು
ಅಂದು ಬೆಳಗ್ಗೆ 8 ಗಂಟೆಯಿಂದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ. ಉದ್ಘಾಟನೆಯ ನಂತರ ಅತಿಥಿ ಗಣ್ಯರನ್ನು ಮೆರವಣಿಗೆ ಮೂಲಕ ಎನ್ಇಎಸ್ ಮೈದಾನಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ನಂತರ ಖ್ಯಾತ ಕನ್ನಡ, ತೆಲುಗು ಗಾಯಕಿ ಮಂಗ್ಲಿ ತಂಡದಿಂದ ರಸಸಂಜೆ ಕಾರ್ಯಕ್ರಮ ಇರುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಂಜಾರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.