ಶಿವಮೊಗ್ಗ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರವು ಬಿಡುಗಡೆಗೊಳಿಸಿದ ಅನುದಾನಗಳು ಸರ್ಕಾರಕ್ಕೆ ವಾಪಸ್ ಹೋಗದಂತೆ ನೋಡಿಕೊಳ್ಳುವುದರ ಮೂಲಕ ನಿಗದಿಪಡಿಸಿದ ಕಾಲಮಿತಿಯೊಳಗಾಗಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸಿ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ವತಿಯಿಂದ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಶುಕ್ರವಾರ (ಫೆ.೧೭) ಏರ್ಪಡಿಸಲಾಗಿದ್ದ 2023ರ ಮಾಹೆಯ ಅಂತ್ಯದವರೆಗಿನ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ಸಾಗರ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಪ್ರಸಕ್ತ ಮಾಹೆಯ ಮಾಸಾಂತ್ಯದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಜಿಲ್ಲಾ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಇದನ್ನೂ ಓದಿ: Bruce Willis: ʻಡೈ ಹಾರ್ಡ್ʼ ಸಿನಿಮಾ ನಟ ಬ್ರೂಸ್ ವಿಲ್ಲೀಸ್‌ಗೆ ಬುದ್ಧಿಮಾಂದ್ಯತೆ: ಚಿಕಿತ್ಸೆಯೇ ಇಲ್ಲ ಎಂದ ಕುಟುಂಬಸ್ಥರು!
“ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತರ್‌ಜಾತಿ ವಿವಾಹವನ್ನು ಪ್ರೋತ್ಸಾಹಿಸುವ ಸಲುವಾಗಿ ಅನುಷ್ಠಾನದಲ್ಲಿರುವ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಉಳಿದ ಫಲಾನುಭವಿಗಳಿಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.
“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಗಳ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಈ ಔಷಧ ಖರೀದಿ ಪ್ರಕ್ರಿಯೆ ವಿಳಂಬವಾಗದಂತೆ ಹಾಗೂ ಸಕಾಲದಲ್ಲಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ಹಾಗೂ ಸಕಾಲದಲ್ಲಿ ಔಷಧ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿನ ಎಲ್ಲ ಆರೋಗ್ಯ ಕೇಂದ್ರಗಳಿಗೆ ನಿರಂತರವಾಗಿ ಹಾಗೂ ಸಕಾಲದಲ್ಲಿ ಔಷಧ ಒದಗಿಸಲಾಗುತ್ತಿದೆ. ಅಲ್ಲದೆ ಅಗತ್ಯಕ್ಕೆ ತಕ್ಕಂತೆ ಔಷಧ ದಾಸ್ತಾನು ಮಾಡಿಕೊಳ್ಳಲಾಗಿದೆ. ಇದಲ್ಲದೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಾಗೂ ವೈದ್ಯಾಧಿಕಾರಿಗಳು ಸದಾ ಸನ್ನದ್ಧರಾಗಿರುವಂತೆ ನೋಡಿಕೊಳ್ಳಲಾಗಿದೆ. ಈ ಹಿಂದೆ ಗುರುತಿಸಲಾದ 2 ಕೊರೊನಾ ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ನೋಡಿಕೊಂಡಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಇಲ್ಲದಂತಾಗಿದೆ ಎಂದರು.
ಇದನ್ನೂ ಓದಿ: Prithvi Shaw: ಪೃಥ್ವಿ ಶಾ ಮೇಲೆ ದಾಳಿಗೆ ಯತ್ನಿಸಿ ಬಂಧನವಾಗಿರುವ ಸಪ್ನಾ ಗಿಲ್ ಯಾರು?
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿರ್ಮಿಸಬೇಕಾದ 2 ಕಟ್ಟಡಗಳ ನಿರ್ಮಾಣ ಕಾರ್ಯವನ್ನು ಮುಂದಿನ 2 ತಿಂಗಳೊಳಗಾಗಿ ಟೆಂಡರ್ ಕರೆದು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದ ಅವರು, ಶೈಕ್ಷಣಿಕವಾಗಿ ಶೇ.100ರ ಪ್ರಗತಿ ಸಾಧಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಪ್ರೊಬೆಷನರಿ ಜಿಲ್ಲಾಧಿಕಾರಿ ದಲ್ಜಿತ್ ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: IND VS AUS: ನೂರನೇ ಟೆಸ್ಟ್ ಪಂದ್ಯವನ್ನಾಡಿದ ಪೂಜಾರಗೆ ವಿಶೇಷ ಗೌರವ ನೀಡಿದ ಬಿಸಿಸಿಐ