ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿಯಾಗಿ ಮಾತನಾಡಿದ ಸಚಿವ ಡಾ. ಅಶ್ವತ್ಥ ನಾರಾಯಣ ಅವರ ಹೇಳಿಕೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ನಗರದ ಶಿವಪ್ಪ ನಾಯಕ ವೃತದಲ್ಲಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿತು.
“ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ ರಾಷ್ಟ್ರಪಿತ ಗಾಂಧೀಜಿಯವರನ್ನು ಕೊಂದವರನ್ನೇ ಆರಾಧಿಸುತ್ತಿರುವ ಬಿಜೆಪಿ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಪ್ರಚೋದನಕಾರಿ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ. ಸರ್ಕಾರ ಸತ್ತು ಹೋಗಿದೆ ಎಂದೇ ಲೆಕ್ಕ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೌನ ಪ್ರತಿಕ್ರಿಯೆ ನೋಡಿದರೆ ಬಿಜೆಪಿಯ ನಿಜ ಸಂಸ್ಕೃತಿ ಏನೆಂಬುದು ಈ ರಾಜ್ಯದ ಜನತೆಗೆ ಅರ್ಥವಾಗುತ್ತಿದೆ. ಕೂಡಲೇ ಅಶ್ವತ್ಥನಾರಾಯಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಯುವ ಕಾಂಗ್ರೆಸ್ ಆಗ್ರಹಿಸಿದೆ.
ಇದನ್ನೂ ಓದಿ: Bhagavad Gita On Cloth: ಗಂಗಾ ಜಲ, ಮಣ್ಣು ಬಳಸಿ ಬಟ್ಟೆ ಮೇಲೆ ಭಗವದ್ಗೀತೆ ಸಾಲು ಬರೆದ ಮುಸ್ಲಿಂ ವ್ಯಾಪಾರಿ
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎನ್. ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷಾ, ಯುವ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮಾರೇಶ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್. ಕಿರಣ್, ಪ್ರಮುಖರಾದ ಮಧು ಉಪ್ಪರಕೇರಿ, ತಂಗರಾಜ್ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಂ. ರಾಕೇಶ್, ಸಂದೀಪ್ ಸುಂದರ್ ರಾಜ್, ಇರ್ಫಾನ್, ಕೆ.ಎಲ್. ಪವನ್, ನದೀಮ್ ಮದರಿ ಪಾಳ್ಯ, ಆದಿಲ್ ಭಾಷಾ, ಮಸ್ತಾನ್, ಹಯಾದ್, ಆಹಾದ್ ಸೋಮಿನಕೊಪ್ಪ, ಮಧು ಸಿಗೆಹಟ್ಟಿ, ಅಜಿತ್, ಪೂರ್ವಿಕ್, ವತನ್ ಲಾಲ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.