Site icon Vistara News

ಅರಣ್ಯ ಒತ್ತುವರಿ ಕುರಿತ 42,422 ಅರ್ಜಿಗಳ ವಿಲೇ ಬಾಕಿ: ಪಶ್ಚಿಮಘಟ್ಟ ಕಾರ್ಯಪಡೆ ಸಭೆಯಲ್ಲಿ ಮಾಹಿತಿ

ಅರಣ್ಯ ಒತ್ತುವರಿ

ಶಿವಮೊಗ್ಗ : ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇವೇಳೆ, ಇನ್ನೂ 42,422 ಅರ್ಜಿಗಳ ವಿಲೇವಾರಿ ಬಾಕಿಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಒತ್ತುವರಿಗೆ ಸಂಬಂಧಿಸಿದಂತೆ ಶಿವಮೊಗ್ಗ ವಲಯದಲ್ಲಿ 12,700 ಪ್ರಕರಣಗಳಿದ್ದು 12,300 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಭದ್ರಾವತಿ ವಲಯದಲ್ಲಿ 972 ಪ್ರಕರಣಗಳಿದ್ದು 18,049 ಎಕರೆ ಒತ್ತುವರಿಯಾಗಿದೆ. ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಯಾವುದೇ ಆದೇಶ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಬಾಕಿಯಿರುವುದಿಲ್ಲ. ಇದೇ ರೀತಿ ಅರಣ್ಯ ಹಕ್ಕುಗಳಿಗಾಗಿ ಒಟ್ಟು 97,085 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು 2,444 ಪ್ರಕರಣಗಳಲ್ಲಿ 3,127 ಎಕರೆ ಜಮೀನಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ 42,422 ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ | ಅರಣ್ಯವಾಸಿಗಳ ಮೇಲಿನ ದೌರ್ಜನ್ಯ ಖಂಡಿಸಿ ಭಟ್ಕಳದಲ್ಲಿ ಸಭೆ

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯ ಸಂರಕ್ಷಣೆ ಕುರಿತಾಗಿ ಅರಿವು ಮೂಡಿಸಲು ಗ್ರಾಮ ಅರಣ್ಯ ಸಮಿತಿಗಳನ್ನು ಇನ್ನಷ್ಟು ಸಕ್ರಿಯಗೊಳಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಗೃತಿ ಮೂಡಿದರೆ ಮಾತ್ರ ಅರಣ್ಯ ಸಂರಕ್ಷಣೆ ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಿದೆ.

ಅರಣ್ಯ ಇಲಾಖೆ ವತಿಯಿಂದ ನಾಮ್‌ ಕೆ ವಾಸ್ತೆ ಗಿಡಗಳನ್ನು ನೆಡುವ ಕಾರ್ಯ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಸಮುದಾಯದ ಸಹಭಾಗಿತ್ವದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಆದಿವಾಸಿಗಳ ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡಬೇಕು. ಕಾವಾಡಿಗರು ಸೇವಾ ಭದ್ರತೆ ಒದಗಿಸುವ ಕುರಿತು ಮನವಿಯನ್ನು ನೀಡಿದ್ದು, ಈ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಒಳಪಟ್ಟ 90% ಜಮೀನು ಸರ್ವೇ ಕಾರ್ಯ ಪೂರ್ಣಗೊಂಡಿದೆ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಜಮೀನು ಕುರಿತು ಗೊಂದಲ ಇರುವುದಿಲ್ಲ. ಪಹಣಿ ಇಂದೀಕರಣ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಶಿವಮೊಗ್ಗ ವಲಯ ಡಿಎಫ್‍ಒ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Travel Guide | ಹೆಚ್ಚಿನ ಜನರಿಗೆ ತಿಳಿಯದ ಭಾರತದ 10 ಪ್ರವಾಸಿ ತಾಣಗಳು

Exit mobile version